ಬೆಂಗಳೂರು: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ವೆಂಕಟಾಚಲ (90) ಅವರು ಬುಧವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಕರ್ನಾಟಕದ ಲೋಕಾಯುಕ್ತರಾಗಿ, ಸುಪ್ರಿಂಕೋರ್ಟ್ ನ್ಯಾಯಧೀಶರಾಗಿ ಸೇವೆ ಸಲ್ಲಿಸಿದ್ದರು.ಬೆಳಗಿನ ಜಾವ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ನಂಜೇಗೌಡ ವೆಂಕಟಾಚಲ ಅವರ ಪೂರ್ಣ ಹೆಸರು. ಇವರು 1930 ಜುಲೈ 3ರಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಮಿತ್ತೂರು ಗ್ರಾಮದಲ್ಲಿ ಜನಿಸಿದರು.
ಮೈಸೂರು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿ ಪಡೆದ ಇವರು ವಕೀಲರಾಗಿ ವೃತ್ತಿ ಜೀವನ ಆರಂಭಿಸಿ, ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನಿವೃತ್ತರಾದರು.
ಕರ್ನಾಟಕದ ಲೋಕಾಯುಕ್ತರಾಗಿದ್ದ ಸಂದರ್ಭದಲ್ಲಿ ವೆಂಕಟಾಚಲ ಅವರು ಲೋಕಾಯುಕ್ತ ಸಂಸ್ಥೆಗೆ ಹೊಸ ರೂಪರೇಷೆ ನೀಡುವ ಮೂಲಕ ಭ್ರಷ್ಟರಲ್ಲಿ ನಡುಕ ಹುಟ್ಟಿಸಿದ್ದರು.
ಲೋಕಾಯುಕ್ತರಾಗಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಪಣ ತೊಟ್ಟಿದ್ದರು. ಸುಳ್ಯಕ್ಕೂ ಬಂದಿದ್ದ ಅವರು ತಾಲೂಕು ಕಚೇರಿ, ನಗರ ಪಂಚಾಯತ್ ಗೆ ಭೇಟಿ ನೀಡಿ ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸಿದ್ದರು.