ಸುಳ್ಯ: ಕೋವಿಡ್ 19 ಹಡುವುದನ್ನು ನಿಯಂತ್ರಿಸುವ ಸಲುವಾಗಿ ಜುಲೈ15ರಿಂದ 22 ರವರೆಗೆ ಒಂದು ವಾರದ ಕಾಲ ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಲಾಕ್ಡೌನ್ ಘೋಷಿಸಿರುವ ಹಿನ್ನಲೆಯಲ್ಲಿ ಸುಳ್ಯ ಶಾಸಕ ಎಸ್.ಅಂಗಾರ ಅವರು ತಾಲೂಕಿನ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿದರು.
ಲಾಕ್ಡೌನ್ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಎಲ್ಲಾ ಕ್ರಮಗಳನ್ನೂ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು. ಲಾಕ್ಡೌನ್ ನಿಯಮಗಳನ್ನು ಪಾಲಿಸಿ ಕೊರೋನಾ ನಿಯಂತ್ರಣದ ನಿಟ್ಟಿನಲ್ಲಿ ಜಿಲ್ಲಾಡಳಿತ ನೀಡುವ ಮಾರ್ಗಸೂಚಿಗಳಿಗೆ ಜನರು ಸಹಕಾರ ನೀಡುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಇಂದು ಮತ್ತು ನಾಳೆ ಎಲ್ಲಾ ಗ್ರಾಮ ಪಂಚಾಯಿತಿ ಮತ್ತು ನಗರ ಪಂಚಾಯಿತಿ ವ್ಯಾಪ್ತಿಯಲ್ಲಿ ಧ್ವನಿವರ್ಧಕದ ಮೂಲಕ ಜನರಲ್ಲಿ ಲಾಕ್ಡೌನ್ ಕುರಿತು ಮಾಹಿತಿ ನೀಡಿ ಜಾಗೃತಿ ಮೂಡಿಸಬೇಕು. ಎರಡು ದಿನಗಳಲ್ಲಿ ಜನರು ದಿನಬಳಕೆಯ ಅಗತ್ಯ ವಸ್ತುಗಳ ಖರೀದಿ ನಡೆಸಬೇಕು. ಇದಕ್ಕೆ ತೊಂದರೆಯಾಗದಂತೆ ಪ್ರತೀ ಪಂಚಾಯತ್ ಅಧಿಕಾರಿಗಳು ನಿಗಾ ವಹಿಸುವಂತೆ ಸೂಚಿಸಬೇಕು ಎಂದು ಇ.ಒ.ಅವರಿಗೆ ಶಾಸಕರು ತಿಳಿಸಿದರು.
ಒಂದು ವಾರಗಳ ಕಾಲ ಇರುವ ಲಾಕ್ಡೌನ್ ಮಾರ್ಗಸೂಚಿಯನ್ನು ಜಿಲ್ಲಾಡಳಿತ ಪ್ರಕಟಿಸಲಿದ್ದು ಕಾನೂನು ಮೀರಿದರೆ ಅಂತವರ ಮೇಲೆ ಕಠಿಣ ಕ್ರಮ ವಹಿಸುವಂತೆ ಪೊಲೀಸ್ ಇಲಾಖೆಗೆ ಶಾಸಕರು ಸೂಚಿಸಿದರು. ಜನರ ಆರೋಗ್ಯದ ದೃಷ್ಠಿಯಿಂದ ಲಾಕ್ಡೌನ್ ನಿರ್ಧಾರವನ್ನು ಜಿಲ್ಲಾಡಳಿತ ತೆಗೆದುಕೊಂಡಿದೆ. ಜನರು ಮನೆಯಿಂದ ಹೊರ ಬಾರದೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಅವರು ವಿನಂತಿಸಿದರು.
ಸಭೆಯಲ್ಲಿ ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ನ.ಪಂ.ಸದಸ್ಯ ವಿನಯ ಕಂದಡ್ಕ, ತಹಶೀಲ್ದಾರ್ ಅನಂತಶAಕರ, ಪೊಲೀಸ್ ವೃತ್ತ ನಿರೀಕ್ಷಕ ನವೀನ್ಚಂದ್ರ ಜೋಗಿ, ತಾ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ, ನ.ಪಂ.ಮುಖ್ಯಾಧಿಕಾರಿ ಮತ್ತಡಿ, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ಆರ್.ಸುಬ್ರಹ್ಮಣ್ಯ ಉಪಸ್ಥಿತರಿದ್ದರು.