ಮಡಿಕೇರಿ: ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಹವಾಮಾನ ಇಲಾಖೆ ಮುನ್ಸೂಚನೆಯಂತೆ ಆ.7 ರಿಂದ 9 ರವರೆಗೆ ಮಳೆಯ ಪ್ರಮಾಣ ಹೆಚ್ಚಾಗುವ ಕಾರಣ ಜಿಲ್ಲೆಯಲ್ಲಿ “ರೆಡ್ ಅಲರ್ಟ್” ಘೋಷಿಸಲಾಗಿದೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಅಧಿಕಾರಿಗಳ ತಂಡ ಸಜ್ಜಾಗಿದೆ. ಮಳೆ ತೀವ್ರತೆಯನ್ನು ಪಡೆದುಕೊಂಡ ಹಿನ್ನೆಲೆ ಜಿಲ್ಲೆಯ ಶಾಲಾ, ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ಮಂಗಳವಾರ ರಜೆ ಘೋಷಿಸಿದ್ದ ಜಿಲ್ಲಾಡಳಿತ ಆ.7 ರಂದು ಕೂಡ ರಜೆ ನೀಡಿ ಆದೇಶಿಸಿದೆ.
ಕೊಡಗು ಜಿಲ್ಲೆಯಲ್ಲಿ ಆಶ್ಲೇಷ ಅಬ್ಬರ ಜೋರಾಗಿದ್ದು, ಕಳೆದ 24 ಗಂಟೆಗಳ ಕಾಲ ಸುರಿದ ಧಾರಾಕಾರ ಮಳೆಗೆ ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ ಹಾಗೂ ವಿರಾಜಪೇಟೆ ತಾಲೂಕುಗಳಲ್ಲಿ ಕಳೆದ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಕಾವೇರಿಯ ಉಗಮ ಕ್ಷೇತ್ರ ತಲಕಾವೇರಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇದರ ಪರಿಣಾಮ ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿ ಇಡೀ ಪ್ರದೇಶ ಜಲಾವೃತಗೊಂಡಿದೆ. ಮಡಿಕೇರಿ, ಭಾಗಮಂಡಲ, ನಾಪೋಕ್ಲು ರಸ್ತೆಗಳಲ್ಲಿ ಪ್ರವಾಹದ ಪರಿಸ್ಥಿತಿ ಇದ್ದು ಗ್ರಾಮಸ್ಥರ ಸಂಚಾರಕ್ಕೆ ಜಿಲ್ಲಾಡಳಿತ ದೋಣಿ ವ್ಯವಸ್ಥೆಯನ್ನು ಮಾಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿಯನ್ನು ಕೂಡ ನಿಯೋಜಿಸಲಾಗಿದೆ.
ತ್ರಿವೇಣಿ ಸಂಗಮದ ನೀರು ಶ್ರೀಭಗಂಡೇಶ್ವರ ದೇವಾಲಯ ಮೆಟ್ಟಿಲನ್ನು ಆವರಿಸಿದ್ದು, ಭಕ್ತರ ಆಗಮನಕ್ಕೆ ಅಡಚಣೆಯಾಗಿದೆ. ಭಾಗಮಂಡಲದಲ್ಲಿ ಪ್ರವಾಹದ ಸ್ಥಿತಿ ಇರುವುದರಿಂದ ಸ್ಥಳಕ್ಕೆ ಭೇಟಿ ನೀಡಿದ ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ಜಿ.ಪಂ ಅಧ್ಯಕ್ಷ ಬಿ.ಎ.ಹರೀಶ್ ಹಾಗೂ ಅಧಿಕಾರಿ ವರ್ಗ ದೋಣಿಯ ಮೂಲಕ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿದರು.
ಗ್ರಾಮಸ್ಥರು ಹಾಗೂ ಭಕ್ತರ ಸಂಚಾರಕ್ಕೆ ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. ಜಿಲ್ಲೆಯ ಪ್ರತಿ ನೋಡಲ್ ಅಧಿಕಾರಿಗಳಿಂದ ಅವರು ಮಾಹಿತಿ ಪಡೆಯುತ್ತಿದ್ದಾರೆ.
ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಕಳೆದ 24 ಗಂಟೆಗಳಲ್ಲಿ 7 ಇಂಚಿಗೂ ಅಧಿಕ ಮಳೆಯಾಗಿದೆ. ಮೂರ್ನಾಡು ಸಮೀಪ ಬಲಮುರಿಯ ಹಳೆಯ ಸೇತುವೆ ಮುಳುಗಡೆಗೊಂಡಿದೆ. ದಕ್ಷಿಣ ಕೊಡಗಿನ ಪೊನ್ನಂಪೇಟೆ, ಮಾಕುಟ್ಟ, ಶ್ರೀಮಂಗಲ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಪೊನ್ನಂಪೇಟೆಯಲ್ಲಿ ದಾಖಲೆಯ ಎಂಟು ಇಂಚು ಮಳೆಯಾಗಿದೆ. ಇಲ್ಲಿಗೆ ಸಮೀಪದ ಕುಂದ ಸೇತುವೆ ಮುಳುಗಡೆಯಾಗಿದೆ. ಎರಡು ದಿನಗಳ ಹಿಂದೆ ಕುಸಿತ ಕಂಡ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಮಾಕುಟ್ಟ ರಸ್ತೆಯ ದುರಸ್ತಿ ಕಾರ್ಯ ಭರದಿಂದ ಸಾಗಿದೆ.
ಸೋಮವಾರಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳು ಮಹಾಮಳೆಯ ಪರಿಣಾಮವನ್ನು ಎದುರಿಸುತ್ತಿವೆ. ಸೋಮವಾರಪೇಟೆ, ಸಕಲೇಶಪುರ ಹೆದ್ದಾರಿಯಲ್ಲಿ ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿ ವಾಹನ ಸಂಚಾರ ಅಸ್ತವ್ಯವಸ್ತಗೊಂಡಿದೆ.
ಮಡಿಕೇರಿ ನಗರದಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ಬೆಟ್ಟಗುಡ್ಡಗಳ ಮೇಲೆ ಮನೆ ನಿರ್ಮಿಸಿಕೊಂಡಿರುವವರು ಜೀವ ಕೈಯಲ್ಲಿಡಿದುಕೊಂಡು ದಿನ ದೂಡುತ್ತಿದ್ದಾರೆ. ಕಳೆದ ವರ್ಷ ಮಳೆಹಾನಿಗೀಡಾಗಿದ್ದ ಇಂದಿರಾನಗರ ಬಡಾವಣೆಯಲ್ಲಿ ಸೋಮವಾರ ರಾತ್ರಿ ಬೃಹತ್ ಪ್ರಮಾಣದ ಬರೆ ಕುಸಿದಿದ್ದು, ಕುಮಾರ್ ಎಂಬುವವರ ಮನೆಗೆ ಹಾನಿಯಾಗಿದೆ. ಅದೃಷ್ಟವಶಾತ್ ಮನೆಯವರು ಅಪಾಯದಿಂದ ಪಾರಾಗಿದ್ದಾರೆ.
ಕೊಡಗಿನಲ್ಲಿ ಧಾರಾಕಾರ ಮಳೆ : ಶಾಸಕ ಬೋಪಯ್ಯರಿಂದ ಮಳೆಹಾನಿ ಪ್ರದೇಶ ಪರಿಶೀಲನೆ
ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಈ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸದ್ಯದಲ್ಲಿಯೇ ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಶಾಸಕರಾದ ಕೆ.ಜಿ.ಬೋಪಯ್ಯ ಅವರು ತಿಳಿಸಿದ್ದಾರೆ. ಭಾಗಮಂಡಲದಲ್ಲಿ ಧಾರಾಕಾರ ಮಳೆಯಿಂದ ಪ್ರವಾಹ ಉಂಟಾಗಿದ್ದು, ಭಾಗಮಂಡಲ-ಮಡಿಕೇರಿ ಮತ್ತು ಭಾಗಮಂಡಲ-ಅಯ್ಯಂಗೇರಿ ರಸ್ತೆ ಬಂದ್ ಆಗಿರುವ ಹಿನ್ನೆಲೆ ಮಂಗಳವಾರ ಭೇಟಿ ನೀಡಿ ವೀಕ್ಷಣೆ ಮಾಡಿದ ನಂತರ ಸುದ್ದಿಗಾರರ ಜೊತೆ ಅವರು ಮಾತನಾಡಿದರು.
ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಮಳೆ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿ ಅವರು ಪ್ರತಿನಿತ್ಯ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ ಎಂದು ಕೆ.ಜಿ.ಬೋಪಯ್ಯ ಅವರು ತಿಳಿಸಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈಗಾಗಲೇ ಕೊಡಗು ಪುನರ್ ನಿರ್ಮಾಣ ಪ್ರಾಧಿಕಾರ ಸಭೆ ನಡೆಸಿದ್ದು, ಪ್ರಸ್ತಾವನೆಯಂತೆ 540 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಸಂತ್ರಸ್ತರಿಗೆ ಕೂಡಲೇ ಮನೆಗಳ ಹಸ್ತಾಂತರ ಮಾಡಲಾಗುವುದು, ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಿದೆ ಎಂದರು.
ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಮಳೆ ಕಡಿಮೆ. ಆದರೂ ಸಹ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಭಾಗಮಂಡಲದಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರ ಅನುಕೂಲಕ್ಕಾಗಿ ಅಗತ್ಯ ಬೋಟ್ ವ್ಯವಸ್ಥೆ, ಈಜುಗಾರರು ಮತ್ತು ಮುಳುಗು ತಜ್ಞರನ್ನು ನಿಯೋಜಿಸಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ ಎಂದು ಕೆ.ಜಿ.ಬೋಪಯ್ಯ ಅವರು ಹೇಳಿದರು.
ಪೆರುಂಬಾಡಿ-ಮಾಕುಟ್ಟ ಅಂತರರಾಜ್ಯ ಹೆದ್ದಾರಿ ಕಾಮಗಾರಿ ಚುರುಕು
ಪೆರುಂಬಾಡಿ-ಮಾಕುಟ್ಟ ಅಂತರರಾಜ್ಯ ಹೆದ್ದಾರಿ ವಾಟೆಕೊಲ್ಲಿ ಬಳಿ ರಸ್ತೆಯನ್ನು ಶಾಸಕರಾದ ಕೆ.ಜಿ.ಬೋಪಯ್ಯ, ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮಾತನಾಡಿದ ಕೆ.ಜಿ.ಬೋಪಯ್ಯ ಅವರು ಕಳೆದ ಬಾರಿಯಂತೆ ಈ ಬಾರಿಯೂ ಮಾಕುಟ್ಟ ಅಂತರರಾಜ್ಯ ಹೆದ್ದಾರಿ ಕುಸಿದಿದ್ದು, ಸಾರ್ವಜನಿಕರಿಗೆ ಹೆಚ್ಚು ಅನುಕೂಲವಾಗುವ ಅಂತರರಾಜ್ಯ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಯನ್ನು ಶಾಶ್ವತವಾಗಿ ನಿರ್ಮಿಸಬೇಕಿದೆ. ಆ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದವರು ರಸ್ತೆ ನಿರ್ಮಾಣಕ್ಕೆ ಸಹಕರಿಸಬೇಕಿದೆ ಎಂದು ಕೆ.ಜಿ.ಬೋಪಯ್ಯ ಅವರು ಹೇಳಿದರು.