ಮಂಗಳೂರು: ಹವಾಮಾನ ಇಲಾಖೆ, ಬೆಂಗಳೂರು, ಇವರು ನೀಡಿದ ಹವಾಮಾನ ಮುನ್ಸೂಚನೆಯಂತೆ ಡಿಸೆಂಬರ್ 3, 4, 5 ಮತ್ತು 6 ರಂದು ಅರಬ್ಬೀ ಸಮುದ್ರವು ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅನಾಹುತವನ್ನು ತಡೆಯುವ ಸಲುವಾಗಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಈ ಮೂಲಕ ಎಲ್ಲಾ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಮೀನುಗಾರಿಕೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.
ವಾಯುಭಾರ ಕುಸಿತದ ಪರಿಣಾಮವಾಗಿ ತಮಿಳುನಾಡಿನಲ್ಲಿ ಭಾರೀ ಮಳೆ ಸುರಿಯುತ್ತಿದೆ. ಕೊಯಮತ್ತೂರಿನಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿದ್ದು, ಗೋಡೆಗಳು ಕುಸಿದು 15 ಜನ ಮೃತಪಟ್ಟಿದ್ದಾರೆ. ಮಳೆಯ ಕಾರಣದಿಂದ ವಿವಿದೆಡೆ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ವಾಯುಭಾರದ ಕುಸಿತದ ಕಾರಣದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬಳ್ಳಾರಿ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಂಗಳೂರು, ಹಾವೇರಿ, ಕೊಡಗು ಸೇರಿ ವಿವಿಧ ಭಾಗಗಳಲ್ಲಿ ಮಳೆ ಆಗಲಿದೆ.