ಕೃಷಿ ಪಂಪ್ ಸೆಟ್‌ಗಳಿಗೆ ದಿನದ 7 ತಾಸು ತ್ರಿ-ಫೇಸ್ ಹಾಗೂ ಗೃಹ ಬಳಕೆ ಮತ್ತು ಕೈಗಾರಿಕೆಗಳಿಗೆ ದಿನದ 24 ಗಂಟೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ……… ಮುಂದೆ ಓದಿ…….
ದಾವಣಗೆರೆ ಜಿಲ್ಲೆಯಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ವರ್ಷ ವಿದ್ಯುತ್ ಕೊರತೆ ಇಲ್ಲ. ಕೆಲವೊಂದು ತಾಂತ್ರಿಕ ಸಮಸ್ಯೆಯಿಂದ ಕೆಲವು ಪ್ರದೇಶಗಳಲ್ಲಿ ನಿರ್ವಹಣಾ ಕಾರ್ಯಗಳಿಗಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿದೆಯೇ ಹೊರತು ಲೋಡ್ ಶೆಡ್ಡಿಂಗ್ ಇಲ್ಲ ಎಂದು ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ಪ್ರತಿನಿತ್ಯ ಸರಾಸರಿ 18,500 ಮೆಗಾವ್ಯಾಟ್ ಬೇಡಿಕೆ ಇದೆ. ಬೇಸಿಗೆ ಆರಂಭವಾಗಿರುವುದರಿಂದ ಸರಾಸರಿಗಿಂತ ಶೇಕಡ 10 ರಷ್ಟು ವಿದ್ಯುತ್ ಬೇಡಿಕೆ ಹೆಚ್ಚಳವಾಗಲಿದೆ ಎಂದು ಸಚಿವ ಕೆ.ಜೆ. ಜಾರ್ಜ್ ಮಾಹಿತಿ ನೀಡಿದರು.
ಬೇಸಿಗೆಯಲ್ಲಿ ಸಂಭವನೀಯ ವಿದ್ಯುತ್ ಕೊರತೆ ನಿಭಾಯಿಸುವ ನಿಟ್ಟಿನಲ್ಲಿ ಹೊರ ರಾಜ್ಯಗಳಿಂದ ವಿದ್ಯುತ್ ವಿನಿಮಯಕ್ಕೆ ಆದ್ಯತೆ ನೀಡಲಾಗಿದೆ ಎಂದ ಅವರು, ಉತ್ತರ ಪ್ರದೇಶ ಮತ್ತು ಪಂಜಾಬ್ ಜೊತೆ ಈ ಸಂಬಂಧ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಕಳೆದ ಬಾರಿ ಬರಗಾಲ ಇದ್ದರೂ 1 ತಿಂಗಳು ಮಾತ್ರ ವಿದ್ಯುತ್ ಪೂರೈಕೆ ಕಡಿಮೆಯಾಗಿತ್ತು. ಆದರೆ ಈ ಬಾರಿ ಪೂರ್ಣ ಪ್ರಮಾಣದಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುವುದು. ಈಗಾಗಲೇ 18,500 ಮೆಗಾವ್ಯಾಟ್ ಬೇಡಿಕೆ ಹೆಚ್ಚಿದ್ದು, ಇಲಾಖೆಯಿಂದಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.