ನಕಲಿ ಮತ್ತು ಕಳಪೆ ಗುಣಮಟ್ಟದ ರಸಗೊಬ್ಬರಗಳ ಪೂರೈಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಈ ಕುರಿತು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ದೇಶಾದ್ಯಂತ ನಕಲಿ ರಸಗೊಬ್ಬರಗಳು ಮತ್ತು ಸಹಾಯಧನ ಹೊಂದಿರುವ ರಸಗೊಬ್ಬರಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಗಟ್ಟಲು ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಪತ್ರದಲ್ಲಿ ರಸಗೊಬ್ಬರಗಳ ಮಾರಾಟ ಮಾಡುವವರ ಪರವಾನಗಿ ರದ್ದುಪಡಿಸುವುದು ಸೇರಿದಂತೆ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ. ಎಲ್ಲ ರಾಜ್ಯಗಳು ಈ ಕುರಿತಂತೆ ರಾಜ್ಯವ್ಯಾಪಿ ಅಭಿಯಾನ ಪ್ರಾರಂಭಿಸಬೇಕು. ಸಾಂಪ್ರದಾಯಿಕ ರಸಗೊಬ್ಬರಗಳಿಗೆ ನ್ಯಾನೊ ಅಥವಾ ಜೈವಿಕ ರಸಗೊಬ್ಬರಗಳ ಹೆಸರು ನೀಡುವ ಮೂಲಕ ರೈತರಿಗೆ ತಪ್ಪು ಮಾಹಿತಿ ನೀಡುವುದನ್ನು ತಡೆಗಟ್ಟಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ.