ಮಂಗಳವಾರ ಬಿಜೆಪಿ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡಿದ ಮೇಲೆ ಪಕ್ಷದಲ್ಲಿ ಅಸಮಾಧಾನದ ಕಿಚ್ಚು ಹೆಚ್ಚುತ್ತಲೇ ಇದೆ. ಸುಳ್ಯ ಕ್ಷೇತ್ರದ ಶಾಸಕರೂ ಆಗಿರುವ ಮೀನುಗಾರಿಕಾ ಸಚಿವ ಎಸ್.ಅಂಗಾರ ಅವರಿಗೆ ಟಿಕೆಟ್ ಸಿಗದಿರುವ ಕಾರಣಕ್ಕೆ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.ಪಕ್ಷ ನಡೆಸಿಕೊಂಡ ರೀತಿ ಸರಿ ಇಲ್ಲ ಎಂದು ಅಂಗಾರ ಹೇಳಿದ್ದಾರೆ.
ಮಂಗಳವಾರ ತಮ್ಮ ಮನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಪಕ್ಷ ಟಿಕೆಟ್ ನೀಡದಿರುವ ಕುರಿತು ನನಗೆ ಅಸಮಾಧಾನ ಇಲ್ಲ. ಆದರೆ, ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಇಲ್ಲದೇ ಮಾಡಿರುವ ಕೆಲಸವನ್ನು ಗೌರವಿಸುವ ಕ್ರಮ ಇದಲ್ಲ” ಎಂದು ಪಕ್ಷದ ಮೇಲಿನ ಬೇಸರ ವ್ಯಕ್ತಪಡಿಸಿದರು.
”ಪ್ರಾಮಾಣಿಕ ರಾಜಕಾರಣಕ್ಕೆ ಈಗ ಬೆಲೆ ಇಲ್ಲದಂತಾಗಿದೆ. ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ. ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಅದೇ ನನಗೆ ಹಿನ್ನಡೆಯಾಯಿತು” ಎಂದು ಅಳಲು ತೋಡಿಕೊಂಡರು.
”ನಾನು ಇನ್ನು ರಾಜಕಾರಣದಲ್ಲಿ ಇರಲ್ಲ. ಚುನಾವಣಾ ಪ್ರಚಾರವನ್ನೂ ಮಾಡುವುದಿಲ್ಲ. ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು. ಚುನಾವಣಾ ಪ್ರಚಾರಕ್ಕೂ ಹೋಗದಿರಲು ನಿರ್ಧರಿಸಿದ್ದೇನೆ” ಎಂದು ಬಿಜೆಪಿಯೊಂದಿಗಿನ ತಮ್ಮ ಸಂಬಂಧವನ್ನು ಬಹುತೇಕ ಕಡಿತಗೊಳಿಸುವ ಮಾತುಗಳನ್ನು ಅವರು ಆಡಿದ್ದಾರೆ.
ಸಚಿವ ಎಸ್.ಅಂಗಾರ ಆರು ಸುಳ್ಯ ಕ್ಷೇತ್ರದಿಂದ ಸತತ ಆರು ಬಾರಿ ಗೆದ್ದು ಶಾಸಕರಾಗಿದ್ದರು. ಆದರೂ ಟಿಕೆಟ್ ನೀಡದಿರುವುದಕ್ಕೆ ಅಸಮಾಧಾನಗೊಂಡಿರುವ ಅಂಗಾರ, ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಮೊದಲ ಬಾರಿಗೆ ಸ್ಪರ್ಧಿಸಿ ಸೋಲನ್ನು ಅನುಭವಿಸಿದ್ದ ಸಚಿವ ಎಸ್.ಅಂಗಾರ ಅವರು ಬಳಿಕ ಸತತ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕಳೆದ ಎರಡುವರೆ ವರ್ಷದಿಂದ ಮೀನುಗಾರಿಕೆ ಸಚಿವರಾಗಿದ್ದರು. ಸುಳ್ಯದಲ್ಲಿ ಸೋಲಿಲ್ಲದ ಸರದಾರ ಎಂಬ ಖ್ಯಾತಿ ಪಡೆದಿದ್ದರು.
ಕರ್ನಾಟಕ ಬಿಜೆಪಿಯ ಹಿರಿಯ ನಾಯಕರು ಒಬ್ಬರಿಂದೊಬ್ಬರು ನಿವೃತ್ತಿಯಾಗುತ್ತಿದ್ದಾರೆ. ಮೊದಲಿಗೆ ಬಿಎಸ್ ಯಡಿಯೂರಪ್ಪ ಅವರು ಚುನಾವಣೆ ಕಣದಿಂದ ನಿವೃತ್ತಿ ಘೋಷಣೆ ಮಾಡಿದ್ದರು. ಆದರೆ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಎಂದಿದ್ದರು. ಇನ್ನು ಮತ್ತೋರ್ವ ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಸಹ ಟಿಕೆಟ್ ಕೈತಪ್ಪುವ ಸುಳಿವು ಇದ್ದಿದ್ದರಿಂದ ಮಂಗಳವಾರವಷ್ಟೇ ಚುನಾವಣೆಗೆ ನಿವೃತ್ತಿ ಘೋಷಿಸಿದರು, ಆದರೆ ರಾಜಕೀಯದಲ್ಲಿ ಇರುತ್ತೇನೆ ಎಂದಿದ್ದಾರೆ.
ಹಾಲಾಡಿ ಶ್ರೀನಿವಾಸ್ ಶೆಟ್ಟಿ ಸಹ ಸ್ವಯಂ ಪ್ರೇರಿತವಾಗಿಯೇ ರಾಜಕೀಯ ನಿವೃತ್ತಿ ಘೋಷಿಸಿದ್ದರು. ಅಲ್ಲದೇ ದಾವಣಗೆರೆ ಬಿಜೆಪಿ ಶಾಸಕ ಎಸ್.ಎ ರವೀಂದ್ರನಾಥ್ ಅವರೂ ಸಹ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಘೋಷಣೆ ಮಾಡಿದ್ದರು. ಇದೀಗ ಸತತ ಆರು ಬಾರಿ ಗೆದ್ದು ವಿಧಾನಸಭೆ ಪ್ರವೇಶಿಸಿದ್ದ ಸುಳ್ಯ ಶಾಸಕ ಎಸ್.ಅಂಗಾರ ಅವರು ಈ ಬಾರಿ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡು ಸಕ್ರಿಯ ರಾಜಕಾರಣಕ್ಕೆ ಗುಡ್ಬೈ ಹೇಳಿದ್ದಾರೆ.
ಬುಧವಾರ ಬೆಳಿಗ್ಗೆ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಟಿಕೆಟ್ ನೀಡದಿರುವುದಕ್ಕೆ ಅಸಮಾಧಾನಗೊಂಡು ಪಕ್ಷಕ್ಕೆ ರಾಜೀನಾಮೆ ನೀಡುವ ನಿರ್ಧಾರ ಮಾಡಿದ್ದಾರೆ. ಇತ್ತ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ ಕೂಡ ಟಿಕೆಟ್ ವಿಚಾರಕ್ಕೆ ಹೈಕಮಾಂಡ್ ವಿರುದ್ದವೇ ಗುಡುಗಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮಾತುಗಳನ್ನಾಡಿದ್ದಾರೆ.
ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಣೆ ಮಾಡಿದ ಬೆನ್ನಲ್ಲೇ ಕರ್ನಾಟಕ ಬಿಜೆಪಿಯಲ್ಲಿ ಅಸಮಾಧಾನದ ಕಿಚ್ಚು ಹೆಚ್ಚಾಗುತ್ತಿದೆ.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…