ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪ್ರಶಸ್ತಿ-ಕೃಷಿ ಉತ್ಪಾದನಾ ಬಹುಮಾನ ಯೋಜನೆಯನ್ನು ಕೃಷಿ ಇಲಾಖಾ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಪ್ರತೀ ವರ್ಷದಂತೆ ಈ ವರ್ಷವೂ (2025-26) ಸಹ ರೈತರಿಂದ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರು ಕೆ-ಕಿಸಾನ್ ಪೋರ್ಟಲ್ ನ Citizen Login ಅಥವಾ RSK Login ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ/ ನಾಗರೀಕ ಸೇವಾ ಕೇಂದ್ರ/ ಸ್ವತಃ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಅಗತ್ಯ ದಾಖಲಾತಿಗಳೊಂದಿಗೆ ರೈತರ FID( Fruits Identification) ಯನ್ನು ಬಳಸಿಕೊಂಡು ಆನ್‍ಲೈನ್ ಮೂಲಕ ಆಗಸ್ಟ್ 30 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ನಿಬಂಧನೆಗಳು: ಕನಿಷ್ಠ ಒಂದು ಎಕರೆ ಪ್ರದೇಶದಲ್ಲಿ ಸ್ಪರ್ಧಾ ಬೆಳೆ ಬೆಳೆದಿರಬೇಕು. ಸ್ವಂತ ಜಮೀನು ಇರುವ ಬಗ್ಗೆ ಪಹಣಿ ಪತ್ರ ಹೊಂದಿರಬೇಕು. ಯಾವುದೇ ಹಂತದಲ್ಲಿ ಒಮ್ಮೆ ಬಹುಮಾನ ಪಡೆದ ರೈತ/ ರೈತ ಕುಟುಂಬದವರು ಮುಂದಿನ ಐದು ವರ್ಷಗಳ ಅವಧಿಗೆ ಆ ಹಂತದ ಬೆಳೆ ಸ್ಪರ್ಧೆಯ ಬಹುಮಾನಕ್ಕೆ ಅರ್ಹನಾಗಿರುವುದಿಲ್ಲ. ಆದರೆ ಆ ಬೆಳೆಯ ಮೇಲಿನ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿರುತ್ತದೆ. ತಾಲ್ಲೂಕು ಮಟ್ಟದಲ್ಲಿ ಬಹುಮಾನ ಪಡೆದವರು ಜಿಲ್ಲಾ ಮಟ್ಟಕ್ಕೆ ಸ್ಪರ್ಧಿಸಬಹುದು ಮತ್ತು ಜಿಲ್ಲಾ ಮಟ್ಟದಲ್ಲಿ ಬಹುಮಾನ ಪಡೆದವರು ರಾಜ್ಯ ಮಟ್ಟಕ್ಕೆ ಸ್ಪರ್ಧಿಸಬಹುದಾಗಿದೆ. ಆದರೆ ಕೆಳ ಹಂತದ ಸ್ಪರ್ಧೆಗೆ ಸ್ಪರ್ಧಿಸುವಂತಿಲ್ಲ. ಕಟಾವಿಗೆ 15 ದಿನಗಳ ಮುಂಚಿತವಾಗಿ ಸಂಬಂಧಿಸಿದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಕಟಾವು ದಿನಾಂಕವನ್ನು ತಿಳಿಸಬೇಕು.
ತಾಲ್ಲೂಕು ಮಟ್ಟದಲ್ಲಿ ಪ್ರಥಮ ಬಹುಮಾನ ರೂ.15000, ದ್ವಿತೀಯ ಬಹುಮಾನ ರೂ.10000, ತೃತೀಯ ಬಹುಮಾನ ರೂ.5000 ನೀಡಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ ರೂ.30000, ದ್ವಿತೀಯ ಬಹುಮಾನ ರೂ.25000, ತೃತೀಯ ಬಹುಮಾನ ರೂ.20000 ನೀಡಲಾಗುತ್ತದೆ. ರಾಜ್ಯ ಮಟ್ಟದಲ್ಲಿ ಪ್ರಥಮ ಬಹುಮಾನ ರೂ.50000, ದ್ವಿತೀಯ ಬಹುಮಾನ ರೂ.40000, ತೃತೀಯ ಬಹುಮಾನ ರೂ.35000 ನೀಡಲಾಗುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.