ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು.ದಶಕಗಳ ಬಳಿಕ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆದಿತ್ತು.ಸಭೆ ಬಳಿಕ ಮಾಹಿತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ , ಒಟ್ಟು 56 ವಿಷಯಗಳ 12 ಸಾವಿರದ 692 ಕೋಟಿ ರೂಪಾಯಿ ಮೊತ್ತದ ಯೋಜನೆಗಳಲ್ಲಿ 11 ಸಾವಿರದ 770 ಕೋಟಿ ರೂಪಾಯಿ ಮೊತ್ತದ 46 ವಿಷಯಗಳು ಕಲ್ಯಾಣ ಕರ್ನಾಟಕಕ್ಕೆ ಸೀಮಿತವಾಗಿವೆ ಎಂದರು.
ಬೀದರ್ ಮತ್ತು ರಾಯಚೂರು ಪಟ್ಟಣಗಳನ್ನು ನಗರ ಪಾಲಿಕೆಗಳನ್ನಾಗಿ ಮೇಲ್ದರ್ಜೆಗೇರಿಸುವುದು. ಬೀದರ್ ಮತ್ತು ಕಲಬುರಗಿ ಜಿಲ್ಲೆಗಳ ಎಲ್ಲಾ ಹಳ್ಳಿಗಳಿಗೆ 7 ಸಾವಿರದ 200 ಕೋಟಿ ರೂಪಾಯಿ ಮೊತ್ತದಲ್ಲಿ, ನಾರಾಯಣಪುರ ಜಲಾಶಯದಿಂದ ಶುದ್ಧ ಕುಡಿಯುವ ನೀರು ಒದಗಿಸಲು ಸಚಿವ ಸಂಪುಟ ಸಮ್ಮತಿ ನೀಡಿದೆ. ಇದರಲ್ಲಿ ರಾಜ್ಯ ಹಾಗೂ ಕೇಂದ್ರದ ಸರ್ಕಾರದ ಪಾಲು ತಲಾ 50ರಷ್ಟು ಇರಲಿದೆ ಎಂದು ಹೇಳಿದರು.ಕಲ್ಯಾಣ ಕರ್ನಾಟಕಕ್ಕೆ ಪ್ರತಿವರ್ಷ ರಾಜ್ಯ ಸರ್ಕಾರ 5 ಸಾವಿರ ಕೋಟಿ ರೂಪಾಯಿ ಅನುದಾನ ನೀಡುತ್ತಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 17 ಸಾವಿರ 439 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವುದು ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಸಚಿವ ಸಂಪುಟ ತೆಗೆದುಕೊಂಡಿದೆ.