ದೇಶದಲ್ಲಿ ತಾಯಂದಿರು ಮತ್ತು ಶಿಶು ಮರಣ ಪ್ರಮಾಣ, ಜಾಗತಿಕ ಮಟ್ಟಕ್ಕಿಂತಲೂ ಇಳಿಕೆಯಾಗಿದೆ, ಆದರೆ ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ.ನಡ್ಡಾ ಲೋಕಸಭೆಯಲ್ಲಿ ತಿಳಿಸಿದ್ದಾರೆ. ……… ಮುಂದೆ ಓದಿ…….
ಪ್ರಶ್ನೋತ್ತರ ಅವಧಿಯಲ್ಲಿ ಅವರು, ಮಾತೆಯರು ಮತ್ತು ಮಕ್ಕಳ ಮರಣ ಪ್ರಮಾಣ ತಡೆಗಟ್ಟಲು ಸರ್ಕಾರ, ಬಹು ಆಯಾಮದ ಹಲವು ಯೋಜನೆಗಳ ಮೂಲಕ ಪ್ರಯತ್ನ ನಡೆಸುತ್ತಿದೆ. ಬುಡಕಟ್ಟು ಪ್ರದೇಶದಲ್ಲೂ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ. ಸೂಕ್ತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು. ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ತಪಾಸಣೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿದರು.
ಆಯುಷ್ಮಾನ್ ಭಾರತ್ ಯೋಜನೆ, ವಿಶ್ವದ ಅತಿದೊಡ್ಡ ಆರೋಗ್ಯ ಕಾರ್ಯಕ್ರಮವಾಗಿದ್ದು, 5 ಲಕ್ಷ ರೂಪಾಯಿವರೆಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸ್ತುತ ದೇಶದಲ್ಲಿ, 61 ಕೋಟಿ ಜನರು ಆಯುಷ್ಮಾನ್ ಭಾರತ ಆರೋಗ್ಯ ಯೋಜನೆಗೆ ನೋಂದಾಯಿಸಿಕೊಂಡಿದ್ದು, ಇದುವರೆಗೆ 8 ಕೋಟಿಗೂ ಅಧಿಕ ಮಂದಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆದಿದ್ದಾರೆ. ಬಡವರ ಆರೋಗ್ಯ ಯೋಜನೆಯಡಿ 1.19 ಲಕ್ಷ ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಯೋಜನೆಯು ಕಿಮೋ ಹಾಗೂ ಬೈಪಾಸ್, ಮಂಡಿ ಸೇರಿದಂತೆ ಸಾವಿರಕ್ಕೂ ಅಧಿಕ ರೀತಿಯ ಶಸ್ತ್ರಚಿಕಿತ್ಸೆಗಳನ್ನು ಒಳಗೊಂಡಿದೆ ಎಂದು ತಿಳಿಸಿದರು. ಆಯುಷ್ಮಾನ್ ಯೋಜನೆಯಡಿ, ಹಣ ಬಿಡುಗಡೆಗೆ ಕೇಂದ್ರ ಸರ್ಕಾರದಿಂದ ವಿಳಂಬವಾಗುತ್ತಿಲ್ಲ. ಡಿಜಿಟಲ್ ಮೂಲಕ ಆಸ್ಪತ್ರೆಗಳಿಗೆ ಹಣ ಸಂದಾಯ ಮಾಡಲಾಗುತ್ತಿದೆ. ಸುಳ್ಳು ಪ್ರಕರಣಗಳ ತಡೆಗೆ ಸೂಕ್ತ ವ್ಯವಸ್ಥೆ ರೂಪಿಸಲಾಗಿದ್ದು, ಈ ಸಂಬಂಧ 1 ಸಾವಿರದ 114 ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. 122 ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ ಎಂದು ಅವರು ಸದನಕ್ಕೆ ತಿಳಿಸಿದರು.