ಮದ್ಯ ಸೇವಿಸಿ ಶಾಲಾ-ಕಾಲೇಜು ಗಳಿಗೆ, ಸರ್ಕಾರಿ ಕಚೇರಿಗಳಿಗೆ ಹಾಜರಾಗಿ ಕರ್ತವ್ಯ ಲೋಪವೆಸಗುವ ಶಿಕ್ಷಕರು, ಉಪನ್ಯಾಸಕರು ಹಾಗೂ ಸರ್ಕಾರಿ ನೌಕರರನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ/ ಪಂಗಡದ ಜನಾಂಗದ ಮೇಲೆ ದೌರ್ಜನ್ಯಗಳನ್ನು ನಿಯಂತ್ರಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಹಾಗೂ ಸಫಾಯಿ ಕರ್ಮ ಚಾರಿಗಳ ಸುರಕ್ಷತೆಗಾಗಿ ರಚಿಸಿರುವ ಜಿಲ್ಲಾ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಸದಸ್ಯರ ಸಲಹೆಗಳನ್ನು ಸ್ವೀಕರಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಯಾವುದೇ ಶಿಕ್ಷಕರು, ಉಪನ್ಯಾಸಕರು ಹಾಗೂ ಸರ್ಕಾರಿ ನೌಕರರು ಮದ್ಯ ಸೇವಿಸಿ ಹಾಜರಾಗುವುದು ಕಂಡುಬಂದಲ್ಲಿ ಕೂಡಲೇ ಅವರನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಬೇಕು.
ಮದ್ಯಪಾನ ಸೇವನೆ ಖಚಿತವಾದರೆ ಕೂಡಲೇ ಸೇವೆಯಿಂದ ಅಮಾನತುಗೊಳಿಸಿ ಕಾನೂನು ಶಿಸ್ತು ಕ್ರಮವನ್ನು ವಹಿಸಬೇಕು. ಅಮಾನತುಗೊಂಡ ಜಾಗಕ್ಕೆ ಬೇರೊಬ್ಬ ಶಿಕ್ಷಕರನ್ನು ನೇಮಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.