ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಕೆಲವು ದಿನಗಳ ಹಿಂದೆ ಡೆತ್‌ನೋಟ್ ಬರೆದಿಟ್ಟು ಗುತ್ತಿಗೆದಾರ ಸಂತೋಷ್ ಪಾಟೀಲ್ ನಾಪತ್ತೆಯಾಗಿದ್ದರು. ಇದೀಗ ಉಡುಪಿ ಶಾಂಭವಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಸಂತೋಷ್ ಪಾಟೀಲ್ ಅವರ ಇಬ್ಬರು ಗೆಳೆಯರು ಪಕ್ಕದ ಕೊಠಡಿಯಲ್ಲಿ ಪತ್ತೆಯಾಗಿದ್ದಾರೆ. ಉಡುಪಿ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಬಂದಿದ್ದು, ಪರಿಶೀಲನೆ ನಡೆಸಿದ್ದಾರೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಕೆಲ ಮಾಧ್ಯಮ ಪ್ರತಿನಿಧಿಗಳ ಮೊಬೈಲ್‌ಗೆ ಡೆತ್‌ನೋಟ್ ವಾಟ್ಸಪ್ ಮೆಸೇಜ್ ಕಳುಹಿಸಿದ್ದರು ತಿಳಿದು ಬಂದಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಾವು ಮಾಡಿದ ಕಾಮಗಾರಿ ಬಿಲ್ ಪಾವತಿಗೆ 40 ಪರ್ಸೆಂಟ್ ಕಮಿಷನ್ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಆರೋಪಿಸಿದ್ದರು. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದಿದ್ದರು.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ ಸಚಿವ ಕೆ.ಎಸ್. ಈಶ್ವರಪ್ಪ, “ಸಂತೋಷ್ ಪಾಟೀಲ್ ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ನನಗೆ ಗೊತ್ತಿಲ್ಲ. ಅವರು ನನ್ನ ಮೇಲೆ ಕಮಿಷನ್ ಆರೋಪ ಮಾಡಿದ್ದರು. ಸಂತೋಷ್ ಪಾಟೀಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದೆ ಎಂದು ಪ್ರತಿಕ್ರಿಯಿಸಿದರು.
ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಸಚಿವ ಈಶ್ವರಪ್ಪ ರಾಜೀನಾಮೆ ಪಡೆದುಕೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಕೆಎಸ್ ಈಶ್ವರಪ್ಪ ಸಚಿವ ಸ್ಥಾನದಲ್ಲಿ ಮುಂದುವರಿಯುವುದಕ್ಕೆ ಬಿಡಬಾರದು. ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಕೂಡಲೇ ಕ್ಯಾಬಿನೆಟ್‌ನಿಂದ ವಜಾಗೊಳಿಸಬೇಕು ಎಂದಿದ್ದಾರೆ.ಇದೊಂದು ಗಂಭೀರ ಪ್ರಕರಣವಾಗಿದೆ ಎಂದು ಹೇಳಿದ್ದಾರೆ.
ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, “ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ಸಂಬಂಧ ತನಿಖೆಯಾಗಬೇಕು. ಮೊದಲು ಡೆತ್ ನೋಟ್ ಸಂಬಂಧ ಎಫ್‌ಐಆರ್ ದಾಖಲಾಗಬೇಕು. ಸಿಎಂ ಬಸವರಾಜ ಬೊಮ್ಮಾಯಿ, ಗೃಹ ಸಚಿವರು ಏನೂ ಮಾಡಲ್ಲ ಅಂತ ಗೊತ್ತು. ಡಿಜಿಪಿ ರಾಜ್ಯದಲ್ಲಿ ಬದುಕಿದ್ದರೆ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ,” ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.