ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಾ ಸಭೆ ನಡೆಸಿದೆ. ಸಭೆಯ ಬಳಿಕ ಮಾರ್ಗಸೂಚಿ ಹೊರಡಿಸಿದ ಬೆನ್ನಲ್ಲೇ ದ ಕ ಜಿಲ್ಲೆಯಲ್ಲೂ ಮುಂಜಾಗ್ರತಾ ಕ್ರಮವಾಗಿ ಕೋವಿಡ್ ನಿಯಮ ಪಾಲಿಸಲು ಜಿಲ್ಲಾಡಳಿತ ಸೂಚಿಸಿದೆ.
ಹೊಸ ವರ್ಷಾಚರಣೆ ವೇಳೆ ಪಬ್, ಬಾರ್, ರೆಸ್ಟೋರೆಂಟ್, ಸಿನಿಮಾ ಹಾಲ್, ಶಾಪಿಂಗ್ ಮಾಲ್, ಕಚೇರಿಗಳು, ಬಸ್, ರೈಲು, ಮೆಟ್ರೋ, ವಿಮಾನಯಾನದ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿದೆ. ವಿಶೇಷವಾಗಿ ವೃದ್ದರು, ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು, ಒಳಾಂಗಣದಲ್ಲಿದ್ದಾಗಲೂ ಮಾಸ್ಕ್ ಧರಿಸಬೇಕು. ಉಸಿರಾಟದ ಸಮಸ್ಯೆ ಹಾಗೂ ಕೋವಿಡ್-19 ಸೋಂಕಿನ ಲಕ್ಷಣ ಹೊಂದಿರುವವರು, ಸ್ವಯಂ ಪ್ರತ್ಯೇಕವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು.
ಸಭೆ ಸಮಾರಂಭಗಳ ಆಯೋಜಕರು ಕೆಲವೊಂದು ಅಗತ್ಯ ಮಾರ್ಗಸೂಚಿಗಳನ್ನು ಪಾಲಿಸಬೇಕು. ಸಾರ್ವಜನಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆದಷ್ಟು ಹೊರಾಂಗಣದಲ್ಲಿ ಮತ್ತು ಒಳ್ಳೆಯ ಗಾಳಿ-ಬೆಳಕಿನ ವ್ಯವಸ್ಥೆ ಇರುವ ಸ್ಥಳಗಳಲ್ಲಿ ಹಗಲು ಹೊತ್ತಿನಲ್ಲಿ ನಡೆಸುವುದರಿಂದ ಆರೋಗ್ಯದ ಮೇಲೆ ಮುಂಜಾನೆ ಹಾಗೂ ಸಂಜೆಯ ಶೀತ ಗಾಳಿಯ ಪರಿಣಾಮವನ್ನು ತಡೆಗಟ್ಟಬಹುದು.
ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದ್ದು, ದೈಹಿಕ ಅಂತರ ಪಾಲನೆ ಅತೀ ಅಗತ್ಯ. ಕೈಗಾರಿಕಾ ಸಂಸ್ಥೆಗಳಲ್ಲಿ, ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬಂದಿ ಕಡ್ಡಾಯವಾಗಿ ದೈಹಿಕ ಅಂತರ ಕಾಯ್ದುಕೊಳ್ಳುವುದರೊಂದಿಗೆ ಮಾಸ್ಕ್ ಧರಿಸಬೇಕು.
ಹೆಚ್ಚಿನ ಜನರ ಗುಂಪುಗೂಡುವಿಕೆಯನ್ನು, ವಿಶೇಷವಾಗಿ ಒಳಾಂಗಣದಲ್ಲಿ ಕಟ್ಟುನಿಟ್ಟಾಗಿ ತಡೆಗಟ್ಟಬೇಕು. ಅಲ್ಲದೆ ಮುಂದಿನ ದಿನಗಳಲ್ಲಿ ಸರ್ಕಾರ ಹೊರಡಿಸುವ ಎಲ್ಲಾ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ.