ಫೆಂಗಲ್ ಚಂಡಮಾರುತದ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಲ್ಲಲ್ಲಿ ಸಾಧಾರಣ ಮಳೆಯಾಗಿದೆ. ಜಿಲ್ಲೆಯಲ್ಲಿ ಡಿ.3 ರಂದು ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧಿಸಲಾಗಿದೆ. ಮೀನುಗಾರಿಕೆಗೆ ತೆರಳಿರುವ ಬೋಟ್‌ಗಳು ಕೂಡಲೇ ಹಿಂತಿರುಗುವಂತೆ ಸೂಚಿಸಲಾಗಿದೆ. ಪ್ರವಾಸಿಗರು ಬೀಚ್‌ಗಳಿಗೆ ಭೇಟಿ ನೀಡದಂತೆ ನಿರ್ಬಂಧಿಸಲಾಗಿದೆ. ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ತಕ್ಷಣ ಪಂಚಾಯತ್ ಅಥವಾ ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
ಕೊಡಗು ಜಿಲ್ಲೆಯಾದ್ಯಂತ ಮಳೆಯಾಗುತ್ತಿದೆ. ಡಿ.3 ರಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಫೆಂಗಲ್ ಚಂಡಮಾರುತದಿಂದ ಕೋಲಾರ ಜಿಲ್ಲೆಯಲ್ಲಿ ಮಳೆ ಮತ್ತು ಶೀತ ಗಾಳಿಯಿಂದ ಜನರು ತತ್ತರಿಸಿದ್ದಾರೆ. 35 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ರಾಗಿ ಹೊಲದಲ್ಲೇ ನೆಲಕಚ್ಚುವ ಭೀತಿ ರೈತರಿಗೆ ಕಾಡುತ್ತಿದೆ.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಹಾಗೂ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ನದಿಗಳಿಗೆ ಅಥವಾ ತಗ್ಗು ಪ್ರದೇಶಗಳಿಗೆ ತೆರಳಬಾರದು ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
ಉಡುಪಿ ಜಿಲ್ಲೆಯಲ್ಲೂ ಧಾರಾಕಾರ ಮಳೆಯಾಗಲಿದ್ದು, ಸಾರ್ವಜನಿಕರು ಹಾಗೂ ಮೀನುಗಾರರು ನದಿ ಪಾತ್ರ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದ್ದಾರೆ.
ಚಾಮರಾಜನಗರ ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದ್ದು, ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಕಳೆದ ಎರಡು ಮೂರು ದಿನಗಳಿಂದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ರಾಜಧಾನಿ ಬೆಂಗಳೂರಿನಲ್ಲೂ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಸಂಚಾರ ದಟ್ಟಣೆಯಿಂದ ಪರದಾಡುವಂತಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಬಿಬಿಎಂಪಿ ಅಧಿಕಾರಿಗಳು ಪರಿಹಾರ ಕಾರ್ಯಾಚರಣೆಗೆ ಸನ್ನದ್ಧರಾಗುವಂತೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸೂಚಿಸಿದ್ದಾರೆ.