ವಿದ್ಯುತ್ ಸರಬರಾಜು ಕಂಪನಿಗಳಿಗೆ ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಪಾವತಿಸಬೇಕಾಗಿದ್ದ ವಿದ್ಯುತ್ ಮೇಲಿನ ಬಡ್ಡಿ ಮನ್ನಾ ಮಾಡಲು ರಾಜ್ಯ ಸಚಿವ ಸಂಪುಟ ಮಹತ್ವದ ನಿರ್ಣಯ ಕೈಗೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ಗ್ರಾಮ ಪಂಚಾಯಿತಿ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಜನರಿಗೆ ಕುಡಿಯುವ ನೀರು ಮತ್ತು ಬೀದಿ ದೀಪ ಸೌಲಭ್ಯ ಕಲ್ಪಿಸಲು ವಿದ್ಯುತ್ ಸರಬರಾಜು ಕಂಪನಿಗಳು ವಿದ್ಯುತ್ ಪೂರೈಸಿದ್ದು, ಇದಕ್ಕೆ ಸಂಬಂಧಿಸಿದಂತೆ 5 ಸಾವಿರದ 257 ಕೋಟಿ ರೂಪಾಯಿ ಖಾತರೀಕರಣ ಮೂಲಕ ತೀರುವಳಿ ಮಾಡಲು ಸಂಪುಟ ತೀರ್ಮಾನಿಸಿದೆ ಎಂದರು.
2025-26ನೇ ಸಾಲಿಗೆ ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್- ನಬಾರ್ಡ್ ಮೂಲಕ ಸುಮಾರು ಒಂದು ಸಾವಿರದ 600 ಕೋಟಿ ರೂಪಾಯಿ ಪುನರ್ ಧನ ಪಡೆಯಲು ಸಂಪುಟ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.
ಹೆಸರಾಂತ ಸಾಹಿತಿ ಬಾನು ಮುಷ್ತಾಕ್ ಅವರ ‘ಎದೆಯ ಹಣತೆ’ ಕೃತಿಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ದೊರೆತಿರುವುದಕ್ಕೆ ಹಾಗೂ ಈ ಕೃತಿಯನ್ನು ಹಾರ್ಟ್ ಲ್ಯಾಂಪ್ ಕೃತಿಯಾಗಿ ಇಂಗ್ಲೀಷ್ ಗೆ ಅನುವಾದ ಮಾಡಿದ ದೀಪಾ ಭಾಸ್ತಿ ಅವರಿಗೆ ರಾಜ್ಯ ಸಚಿವ ಸಂಪುಟ ಅಭಿನಂದನೆ ಸಲ್ಲಿಸಿದೆ ಎಂದು ತಿಳಿಸಿದರು.
ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮರು ನಾಮಕರಣ ಮಾಡಲು ತೀರ್ಮಾನಿಸಲಾಗಿದೆ. ರಾಮನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಲು ಸಂಪುಟ ಅನುಮೋದಿಸಿದೆ. ಇದಕ್ಕೆ ಸಂಬಂಧಿಸಿದ ಆದೇಶ ಶೀಘ್ರ ಹೊರಬೀಳಲಿದೆ ಎಂದು ಹೇಳಿದರು.