ರಾಜ್ಯದಲ್ಲಿ ಬಿರು ಬೇಸಿಗೆ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ರಾಜ್ಯದ ಜಲಾಶಯಗಳಿಂದ ನೀರು ಬಿಡುಗಡೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಕುಡಿಯುವ ನೀರಿನ ನಿರ್ವಹಣೆ ಬಗ್ಗೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ.
ವಿಜಯಪುರ ನಗರಕ್ಕೆ ಕುಡಿಯುವ ನೀರು ಪೂರೈಸುವ ಯೋಜನೆಗಾಗಿ 50 ಕೋಟಿ ರೂಪಾಯಿ ಮೊತ್ತದ ಕಾಮಗಾರಿಗೆ ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತಿದೆ ಎಂದು ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.ಕೃಷ್ಣಾ ನದಿಯಿಂದ ನೀರೆತ್ತಿ ಕೊಲ್ಹಾರದಿಂದ ಮುಳವಾಡ, ಹೊನಗನಹಳ್ಳಿ, ವಿಜಯಪುರ ಮಾರ್ಗದಲ್ಲಿ ಅಳವಡಿಸಿರುವ ಪಿ.ಎಸ್.ಸಿ ಕೊಳವೆ ಮಾರ್ಗ ಪದೇ ಪದೇ ಒಡೆದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತಿತ್ತು.ಈ ಸಮಸ್ಯೆಯನ್ನು ಸರಿಪಡಿಸಿ ಎಂ.ಎಸ್. ಪೈಪ್ ಅಳವಡಿಕೆ ಮತ್ತಿತರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.