ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಎತ್ತಿನಹೊಳೆ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಚಿಕ್ಕಮಗಳೂರು, ಹಾಸನ, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ನೀರಿನ ನೆಲೆಯಾಗಲಿರುವ ಎತ್ತಿನ ಹೊಳೆ ಸಮಗ್ರ ಕುಡಿಯುವ ನೀರಿನ ಪೂರೈಕೆಯ ಯೋಜನೆಗೆ ಹಾಸನ ಜಿಲ್ಲೆ, ಸಕಲೇಶಪುರ ತಾಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಲಾಯಿತು.
ಈ ಯೋಜನೆಯಿಂದ 7 ಜಿಲ್ಲೆಗಳ 29 ತಾಲೂಕುಗಳ ವ್ಯಾಪ್ತಿಯ 6 ಸಾವಿರದ 657 ಗ್ರಾಮಗಳು ಹಾಗೂ 38 ಪಟ್ಟಣ ಪ್ರದೇಶಗಳ ವ್ಯಾಪ್ತಿಯ 75 ಲಕ್ಷ ಜನರಿಗೆ ಲಾಭ ದೊರೆಯಲಿದೆ. ಮೊದಲ ಹಂತದ ಯೋಜನೆ ಇದಾಗಿದ್ದು, 2024ರ ಜುಲೈ ಅಂತ್ಯಕ್ಕೆ ಈ ಯೋಜನೆಗೆ 16 ಸಾವಿರದ 76 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ.
ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಎನ್. ರಾಜಣ್ಣ, ಎಂ.ಬಿ. ಪಾಟೀಲ್, ಡಾ. ಜಿ.ಪರಮೇಶ್ವರ್ ಸೇರಿದಂತೆ ಐದು ತಾಲೂಕುಗಳ ಶಾಸಕರು, ಚುನಾಯಿತ ಜನಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೂ ಮುನ್ನ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದೊಡ್ಡನಾಗರ ಮತ್ತು ಹೆಬ್ಬನಹಳ್ಳಿಯ ನೀರು ಎತ್ತುವ ಘಟಕದ ಬಳಿ ಪೂರ್ವಸಿದ್ದತೆ ಪರಿಶೀಲಿಸಿ ಪೂಜೆ ಸಲ್ಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ, ಎತ್ತಿನ ಹೊಳೆ ನಮ್ಮ ಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆ. ಹಲವು ಅಡೆತಡೆಗಳನ್ನು ಎದುರಿಸಿ ಇಚ್ಚಾಶಕ್ತಿಯಿಂದ ಯೋಜನೆಯನ್ನು ಕಾರ್ಯಗತಗೊಳಿಸಿದ್ದೇವೆ. ಇದರಿಂದ ಹಳೆ ಮೈಸೂರು ಭಾಗದ ಜಿಲ್ಲೆಗಳಿಗೆ ಕುಡಿಯುವ ನೀರು ಹರಿಸುವ ಜೊತೆಗೆ ಕೆರೆ ತುಂಬಿಸಲಾಗುವುದು ಎಂದು ಮಾಹಿತಿ ನೀಡಿದರು.