ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೊಡಗಿನ ಪ್ರಮುಖ ಜಲಾಶಯವಾದ ಹಾರಂಗಿಗೆ ನೀರಿನ ಒಳಹರಿವಿನಲ್ಲಿ ಹೆಚ್ಚಳವಾಗಿದೆ. ಜಲಾಶಯಕ್ಕೆ 10 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ ನದಿಗೆ 14500 ಕ್ಯೂಸೆಕ್ ನೀರು ಹೊರಬಿಡಲಾಗಿದೆ. ದಾವಣಗೆರೆ ಜಿಲ್ಲೆಯ ಮೂಲಕ ಹಾದು ಹೋಗಿರುವ ತುಂಗಾಭದ್ರಾ ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಹೊನ್ನಾಳಿಯಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಜಿ.ಎಂ.ಗಂಗಾಧರ ಸ್ವಾಮಿ ಹೇಳಿದ್ದಾರೆ. ತುಂಗಾ ಜಲಾಶಯದಿಂದ 69 ಸಾವಿರ ಮತ್ತು ಭದ್ರಾ ಜಲಾಶಯದಿಂದ 37 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಇದರಿಂದ ಹೊನ್ನಾಳಿ ಪಟ್ಟಣದ ಬಾಲರಾಜ್‌ಘಾಟ್ ಪ್ರದೇಶದ ಸಂತ್ರಸ್ಥರಿಗಾಗಿ ಅಂಬೇಡ್ಕರ್ ಭವನದಲ್ಲಿ ಕಾಳಜಿ ಕೇಂದ್ರ ತೆರೆದು 8 ಕುಟುಂಬದ 33 ಜನರನ್ನು ಸ್ಥಳಾಂತರ ಮಾಡಿ ಮೂಲ ಸೌಕರ್ಯ ಹಾಗೂ ವೈದ್ಯಕೀಯ ಸೇವೆಗಳನ್ನು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

