ನಟ ಪುನೀತ್ ರಾಜಕುಮಾರ್ ಕನ್ನಡ ಭಾಷೆ, ನಾಡಿಗೆ ದುಡಿದಿದ್ದಾರೆ. ಹೀಗಾಗಿ ಕನ್ನಡ ರಾಜ್ಯೋತ್ಸವದಂದೇ ಕರ್ನಾಟಕ ರತ್ನ ನೀಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಪುನೀತ್ ರಾಜ್ ಕುಮಾರ್ ಪಾಠವನ್ನು ಪಠ್ಯದಲ್ಲಿ ಸೇರಿಸುವ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧರಿಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
67 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ತ್ರಿವರ್ಣ ಧ್ವಜಾರೋಹಣ ಮಾಡಿದ್ದಾರೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಕನ್ನಡ ಧ್ವಜಾರೋಹಣ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ನಟ ಪುನೀತ್ ರಾಜಕುಮಾರ್ ಗೆ ಕನ್ನಡ ರಾಜ್ಯೋತ್ಸವದಂದೇ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದು ನಮ್ಮ ಬಯಕೆಯಾಗಿತ್ತು. ಶಾಲಾ ಪಠ್ಯದಲ್ಲಿ ಪುನೀತ್ ರಾಜ್‌ಕುಮಾರ್ ಸಾಧನೆ, ಪ್ರೇರಣೆ ಕುರಿತ ಮಾಹಿತಿ ಸೇರಿಸಬೇಕು ಎನ್ನುವ ಮನವಿಗಳು ಬಂದಿವೆ. ಪಠ್ಯ ಸೇರ್ಪಡೆ ವಿಚಾರ ಸಂಬಂಧ ಹಂತಹಂತವಾಗಿ ಕ್ರಮ ಕೈಗೊಳ್ಳಲಾಗುತ್ತದೆ. ಈ ಸಂಬಂಧ ಏನೆಲ್ಲ ಸಾಧ್ಯವೋ ಎಲ್ಲವನ್ನೂ ಮಾಡುತ್ತೇವೆ ಎಂದು ತಿಳಿಸಿದರು.