ಮಳೆಯಿಂದ ಹಾನಿಗೊಳಗಾದ ಬೀದರ್ ಜಿಲ್ಲೆಯ ಹಲವು ಗ್ರಾಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಬಿ. ಖಂಡ್ರೆ ಭೇಟಿ ಪರಿಶೀಲನೆ ನಡೆಸಿದರು. ಬಳಿಕ ಸ್ಥಳೀಯ ನಾಗರಿಕರಿಂದ ಸಮಸ್ಯೆ ಆಲಿಸಿದರು. ಕಳೆದ ಹಲವು ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದಾಗಿ ಜಿಲ್ಲೆಯ ಕಮಲಾನಗರ, ಔರಾದ್ ತಾಲೂಕಿನ ಅಕನಾಪೂರ, ಬಾವಲಗಾಂವ, ಹಂಗರಗಾ, ಸಾವರಗಾಂವ, ಬೋಂತಿಗಾಮಾನಾಯಕ ತಾಂಡದಲ್ಲಿ ಬೆಳೆ ಹಾನಿ ಸಂಭವಿಸಿದ್ದು,ಸೇತುವೆ, ಕೆರೆ ಕಟ್ಟೆಗಳು ಕೊಚ್ಚಿ ಹೋಗಿವೆ.
ರೈತರು ಮತ್ತು ಸಂತ್ರಸ್ತ ನಾಗರಿಕರ ಸಮಸ್ಯೆಗಳನ್ನು ಆಲಿಸಿದ್ದೇನೆ. ಎಲ್ಲಾ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಪುನರ್ವಸತಿ, ಪುನರ್ ನಿರ್ಮಾಣ ಕಾರ್ಯ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಔರಾದ್ ತಾಲೂಕಿನಲ್ಲಿ ದಾಖಲೆಯ 300 ಮಿಲಿ ಮೀಟರ್ ಮಳೆಯಾಗಿರುವುದರಿಂದ ಅಕನಾಪೂರ ಗ್ರಾಮದ ಕೆರೆ ಒಡೆದು ಬಹಳಷ್ಟು ಹಾನಿಯಾಗಿದೆ. ಬೆಳೆ ಹಾನಿ ಬಗ್ಗೆ ಅಧಿಕಾರಿಗಳು ಸಮೀಕ್ಷೆಯ ಬಳಿಕ ಸರ್ಕಾರದಿಂದ ಪರಿಹಾರ ನೀಡಲಾಗುವುದು. ಹೆಚ್ಚಿನ ಪರಿಹಾರಕ್ಕೆ ಸಚಿವ ಸಂಪುಟದಲ್ಲಿ ಚರ್ಚಿಸಿ, ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.
ಈ ಸಂದರ್ಭದಲ್ಲಿ ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಂಖಾನ್, ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಗಿರೀಶ್ ಬದೋಲೆ, ಬೀದರ ಸಹಾಯಕ ಆಯುಕ್ತ ಮೊಹಮದ್ ಶಕೀಲ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….


