ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿಯಾಗುವ ಮಳೆ ಸಾಧ್ಯತೆ ಇದ್ದು, ಅಲ್ಲಲ್ಲಿ ಭಾರಿ ಮಳೆ ಸಾಧ್ಯತೆ ಇದೆ. ಒಳನಾಡು ಜಿಲ್ಲೆಗಳಲ್ಲಿ ಜುಲೈ 26 ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು ನಂತರ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ ಕರಾವಳಿ ಭಾಗದಲ್ಲಿ ಜುಲೈ 27 ರವರೆಗೆ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅರಬ್ಬಿ ಸಮುದ್ರದಲ್ಲಿ ಹೆಚ್ಚಿನ ಗಾಳಿ ಬೀಸುವ ಸಾಧ್ಯತೆ ಇದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮತ್ತು ಬೆಂಗಳೂರಿನ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಎಚ್ಚರಿಕೆ ನೀಡಿದೆ.
ರಾಜ್ಯದ ಉತ್ತರಕನ್ನಡ , ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು ರೆಡ್ ಎಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಎಲರ್ಟ್ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಜನರು ನದಿಗಳು, ನೀರಿರುವ ಪ್ರದೇಶ ಮತ್ತು ಸಮುದ್ರದಿಂದ ದೂರವಿರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಸಾರ್ವಜನಿಕರು, ವಿಶೇಷವಾಗಿ ಮಕ್ಕಳು ಮತ್ತು ಕಾರ್ಮಿಕರು ಮಳೆ, ಗಾಳಿ ಅಥವಾ ಸಿಡಿಲು ಇರುವಾಗ ಹೊರಗೆ ಹೋಗಬಾರದು ಮತ್ತು ಸುರಕ್ಷಿತ ಕಟ್ಟಡಗಳಲ್ಲಿ ಆಶ್ರಯ ಪಡೆಯಬೇಕು. ಕೃಷಿಕರು ಮಳೆ ಅಥವಾ ಸಿಡಿಲಿನಂತಹ ಸಂದರ್ಭದಲ್ಲಿ ಹೊರಗಿನ ಕೃಷಿ ಚಟುವಟಿಕೆಗಳಿಂದ ದೂರವಿರಬೇಕು ಎಂದು ಸಲಹೆ ನೀಡಲಾಗಿದೆ. ಅಪಾಯಕಾರಿ ಮರಗಳು ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ಮತ್ತು ಮುರಿದ ವಿದ್ಯುತ್ ತಂತಿಗಳಿಂದ ದೂರವಿರುವಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಜನರು ದುರ್ಬಲ ಅಥವಾ ಹಳೆಯ ಕಟ್ಟಡಗಳು ಮತ್ತು ಮರಗಳಿಂದ ದೂರವಿರಬೇಕು. ಕಟ್ಟಡಗಳ ಮೇಲಿರುವ ಅಪಾಯಕಾರಿ ಕೊಂಬೆಗಳು ಇದ್ದಲ್ಲಿ ಅದನ್ನು ಮೊದಲೇ ಕತ್ತರಿಸಿ ವಾಸಿಸುವ ಕಟ್ಟಡಗಳನ್ನು ರಕ್ಷಿಸಿಕೊಳ್ಳಬೇಕು.ಕೆಲವು ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದ್ದು, ಅಂತಹ ಪ್ರದೇಶಗಳ ನಿವಾಸಿಗಳು ಸ್ಥಳೀಯ ತಹಶೀಲ್ದಾರ್ ಅಥವಾ ಗ್ರಾಮ ಪಂಚಾಯತ್ ಅಧಿಕಾರಿಗಳನ್ನು ಸಂಪರ್ಕಿಸಿ ಹತ್ತಿರದ ಪರಿಹಾರ ಕೇಂದ್ರಗಳಲ್ಲಿ ಮುಂಚಿತವಾಗಿ ಆಶ್ರಯ ಪಡೆಯುವಂತೆ ಮಾಹಿತಿ ನೀಡಲಾಗಿದೆ.

