ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ 30 ಸೆಂಟಿಮೀಟರ್, ಭಾಗಮಂಡಲದಲ್ಲಿ11 ಸೆಂಟಿಮೀಟರ್ ಮಳೆಯಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಇದೇ 23 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಒಳನಾಡಿನಲ್ಲಿಯೂ ಮಳೆಯಾಗಲಿದೆ. ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಇದೇ 21 ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿಯೂ 21 ರವರೆಗೆ ಹಗುರದಿಂದ ಮಳೆಯಾಗಲಿದೆ.
ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ನಿರಂತರ ಮಳೆ ಸುರಿಯುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ.ಲಕ್ಷ್ಮಿ ಪ್ರಿಯ ಆದೇಶಿಸಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬಿರುಸುಗೊಂಡಿದೆ. ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ಇಂದು ಕೂಡ ಮುಂದುವರಿದಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಕಾರಣ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಜನತೆ ನದಿ ಮತ್ತು ಕಡಲ ತೀರದತ್ತ ತೆರಳದೆ ಎಚ್ಚರಿಕೆ ವಹಿಸಬೇಕು. ಮೀನುಗಾರರು ಯಾವುದೇ ಕಾರಣಕ್ಕೂ ಮೀನುಗಾರಿಕೆಗೆ ತೆರಳಬಾರದು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಮುನ್ನೆಚ್ಚರಿಕೆ ನೀಡಿದ್ದಾರೆ. ಈ ನಡುವೆ ಮಳೆಯಿಂದ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ಜಿಲ್ಲೆಯ ಎಲ್ಲಾ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿತ್ತು. ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ಮೀನುಗಾರಿಕೆಗೆ ತೆರಳಿ ದೋಣಿ ಮುಗುಚಿ ನಾಪತ್ತೆಯಾಗಿದ್ದ ಮೂವರು ಮೀನುಗಾರರ ನಿಧನಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂತಾಪ ಸೂಚಿಸಿದ್ದಾರೆ. ಸರ್ಕಾರದಿಂದ ನಿಯಮಾನುಸಾರ ಪರಿಹಾರ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದ್ದು, ಕಳೆದ ರಾತ್ರಿ ಮನೆ ಗೋಡೆ ಕುಸಿದು 2 ವರ್ಷದ ಬಾಲಕಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ, ನೈಸರ್ಗಿಕ ವಿಕೋಪ ಪರಿಹಾರ ನಿಧಿಯಿಂದ 5 ಲಕ್ಷ ಪರಿಹಾರ ಘೋಷಿಸಲಾಗಿದೆ.