ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯಾದ್ಯಂತವೂ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ಗ್ರಾಮೀಣ ಜನಜೀವನ ವ್ಯತ್ಯಯಗೊಂಡಿದ್ದು, ಗಾಳಿಯಿಂದಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಮಡಿಕೇರಿಯ ಕಾವೇರಿ ಜಲಾನಯನ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದಾಗಿ ಕೊಡಗಿನ ಪ್ರಮುಖ ಜಲಾಶಯವಾದ ಹಾರಂಗಿಗೆ ನೀರಿನ ಹರಿವೂ ಹೆಚ್ಚಾಗಿದ್ದು ಪ್ರಸ್ತುತ 7500 ಕ್ಯೂಸೆಕ್ ಹರಿವಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಸತತ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಸುಳ್ಯ ಮತ್ತು ಕಡಬ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ಪ್ರಾಥಮಿಕ ಮತ್ತು ಪ್ರೌಢ ಶಾಲೆ ಸೇರಿದಂತೆ ಪದವಿ ಪೂರ್ವ ಕಾಲೇಜುವರೆಗೆ ರಜೆ ಘೋಷಿಸಲಾಗಿತ್ತು.
ಉತ್ತರಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ದಾಂಡೇಲಿ ಹಾಗೂ ಜೊಯಿಡಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ರಜೆ ಘೋಷಿಸಿದ್ದರು. ಸತತ ಮಳೆಗೆ ಕಾರವಾರ ಹಾಗೂ ಶಿರಸಿಯಲ್ಲಿ ಭೂ ಕುಸಿತ ಸಂಭವಿಸಿದೆ. ಕಾರವಾರ ತಾಲೂಕಿನ ಬಾಳೆಮನೆ ಸಮೀಪ ಇಂದು ನಸುಕಿನ ಜಾವ ಭೂಕುಸಿತ ಉಂಟಾಗಿದ್ದು, ಕದ್ರಾದಿಂದ ಕೊಡಸಳ್ಳಿ ಅಣೆಕಟ್ಟಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಈ ಮಾರ್ಗದಲ್ಲಿ ವಾಹನ ಹಾಗೂ ಸಾರ್ವಜನಿಕರ ಸಂಚಾರವನ್ನು ಜಿಲ್ಲಾಧಿಕಾರಿ ನಿಷೇಧಿಸಿದ್ದಾರೆ.
ದಾವಣಗೆರೆ ಜಿಲ್ಲಾದ್ಯಂತ ವ್ಯಾಪಕ ಮಳೆ ಮುಂದುವರಿದಿದ್ದು, ಸಾಮಾನ್ಯ ಜನ ಜೀವನ ಬಾಧಿತಗೊಂಡಿದೆ. ಶೀತಗಾಳಿ, ರಭಸವಾದ ಮಳೆಯಿಂದಾಗಿ ಕೃಷಿ ಚಟುವಟಿಕೆಗಳಿಗೆ ಅಡ್ಡಿ ಉಂಟಾಗಿದೆ. ತರಕಾರಿ ಮತ್ತು ತೋಟಗಾರಿಕಾ ಬೆಳೆಗಳಿಗೆ ಹಾನಿ ಸಂಭವಿಸಿದೆ. ಈ ಮಧ್ಯೆ ತುಂಗಾಭದ್ರಾ ನದಿಯ ನೀರಿನ ಮಟ್ಟದಲ್ಲಿ ಏರಿಕೆ ಕಂಡಿದ್ದು, ಹರಿಹರ ತಾಲೂಕು ಆಡಳಿತ ಮತ್ತು ಜಿಲ್ಲಾಡಳಿತಗಳು ಎಚ್ಚರಿಕೆ ವಹಿಸಿವೆ. ಮಹಾರಾಷ್ಟ್ರದ ಕೃಷ್ಣಾ ನದಿ ಪಾತ್ರದಲ್ಲಿ ಮತ್ತೆ ವ್ಯಾಪಕ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಇದರಿಂದಾಗಿ ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿಸಲಾಗುತ್ತಿದೆ.
ಯಾದಗಿರಿ ಜಿಲ್ಲೆಯ ಭೀಮಾ ಹಾಗೂ ಕೃಷ್ಣಾ ನದಿ ಸೇರಿದಂತೆ ಜಲಾಶಯಗಳ ವ್ಯಾಪ್ತಿಯಲ್ಲಿ ಯಾವುದೇ ಪರಿಸ್ಥಿತಿಯಲ್ಲಿ ಮಾನವ ಜೀವಹಾನಿಯಾಗದಂತೆ ಎಚ್ಚರಿಕೆ ವಹಿಸುವಂತೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಬಿ.ಸುಶೀಲಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಎಲ್ಲ ನೋಡಲ್ ಅಧಿಕಾರಿಗಳು, ಆಯಾ ತಹಶೀಲ್ದಾರ್ ಹಾಗೂ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ಸಂದರ್ಭದಲ್ಲಿ ಮಾನವ, ಜಾನುವಾರು ಜೀವಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಿದ್ದಾರೆ.
ಕರಾವಳಿ ಜಿಲ್ಲೆಗಳು ಹಾಗೂ ಶಿವಮೊಗ್ಗ ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗಾಳಿ ಸಹಿತ ಧಾರಾಕಾರ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…