ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ೨ ಸಾವಿರದ ೮೬೩ ಎಕರೆ ಭೂಮಿಯನ್ನು ಗುರುತಿಸಲಾಗಿದ್ದು, ಭೂಸ್ವಾಧೀನಕ್ಕೆ ರೈತರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಕೈಗಾರಿಕಾ ಪುದೇಶವನ್ನಾಗಿ ಅಭಿವೃದ್ಧಿಪಡಿಸಲು ಉದ್ದೇಶಿಸಿರುವ ಯೋಜನೆಯ ಅನುಷ್ಠಾನದಲ್ಲಿ ಉಂಟಾಗಿರುವ ಸಮಸ್ಯೆಗಳ ಕುರಿತು ಚರ್ಚಿಸಲು ಆಯೋಜಿಸಿದ್ದ ರೈತರು ಮತ್ತು ಅಧಿಕಾರಿಗಳ ಸಭೆಯಲ್ಲಿ ಸಚಿವರು ಭಾಗಿಯಾಗಿದ್ದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಾಗೂ ರಾಷ್ಟ್ರೀಯ ಹೆದ್ದಾರಿಗೆ ಸಮೀಪವಿರುವ ಜಂಗಮಕೋಟೆ ಹೋಬಳಿ ಪ್ರದೇಶದ ವ್ಯಾಪ್ತಿಯಲ್ಲಿ ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿ ಪಡಿಸಿದ್ದೇ ಆದಲ್ಲಿ ಹೂಡಿಕೆದಾರರು, ಈ ಭಾಗಕ್ಕೆ ಹೆಚ್ಚಾಗಿ ಬರುವ ನಿರೀಕ್ಷೆ ಇದೆ ಎಂದರು. ಇದು ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಪೂರಕವಾಗಲಿದೆ. ಈಗಾಗಲೇ ರೈತರನ್ನು ಕರೆಯಿಸಿ ಅವರು ಸ್ವಯಂಪ್ರೇರಿತರಾಗಿ ಭೂಮಿ ನೀಡಿ ಅಭಿವೃದ್ಧಿಗೆ ಸಹಕರಿಸುವಂತೆ ಮನವಿಮಾಡಿ ಮನವೊಲಿಸುವ ಪ್ರಯತ್ನಗಳು ನಡೆದಿವೆ. ಕೆಲವು ರೈತರು ಭೂಮಿ ನೀಡಲು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದು, ಕೆಲವು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.