ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ ಹಾನಿ ಕುರಿತಂತೆ ಸಮಗ್ರ ಸಮೀಕ್ಷೆ ನಡೆಸಿ ಪರಿಹಾರೋಪಾಯ ಕ್ರಮಗಳನ್ನು ಕೈಗೊಳ್ಳುವಂತೆ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟಿಲ್ ಸೂಚನೆ ನೀಡಿದ್ದಾರೆ.
ವಿಜಯಪುರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಹಾಳಾಗಿರುವ ರಸ್ತೆಗಳ ಕುರಿತು ಪರಿಶೀಲನೆ ನಡೆಸಿ ಅಗತ್ಯ ಕ್ರಮ ವಹಿಸಬೇಕು. ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆ ನಡೆಸಬೇಕು. ಜಿಪಿಎಸ್ ಫೋಟೋ ಬಳಸಿ ಯಾವುದೇ ರೈತರಿಂದ ದೂರು ಬರದಂತೆ ನೋಡಿಕೊಂಡು ಎಚ್ಚರಿಕೆ ವಹಿಸಬೇಕು. ಯಾವುದೇ ರೈತರಿಂದ ದೂರುಗಳು ಬಂದಲ್ಲಿ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರವಾಹ ಪರಿಸ್ಥಿತಿ ಮರುಕಳಿಸದಂತೆ ಎಚ್ಚರಿಕೆ ವಹಿಸಿ, ಪರಿಸ್ಥಿತಿ ಮರುಕಳಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯ ಆಲಮಟ್ಟಿ ಜಲಾಶಯಲ್ಲಿ ಒಳಹರಿವು ಹೆಚ್ಚಾಗಿರುವುದರಿಂದ ಜಲಾಶಯದಿಂದ ನೀರು ಹೊರಬಿಡಲಾಗುತ್ತಿದೆ. ಜಿಲ್ಲೆಯಲ್ಲಿ ಅವಶ್ಯಕತೆ ಇರುವ ಕೆರೆಗಳನ್ನು ತುಂಬಿಸಲು ಈ ನೀರನ್ನು ಬಳಸಿಕೊಂಡು ಕೆರೆ ತುಂಬಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.