ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹವಾಮಾನ ಬದಲಾಗಿದ್ದು, ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಆರಂಭವಾಗಿದೆ. ನವೆಂಬರ್ 25ರ ಬೆಳಿಗ್ಗೆ 8 ಗಂಟೆಯವರೆಗಿನ ಮುನ್ಸೂಚನೆಯ ಪ್ರಕಾರ, ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈ ಮಳೆಯ ವಾತಾವರಣ ನವೆಂಬರ್ 27 ಅಥವಾ 28 ರವರೆಗೆ ಮುಂದುವರಿಯುವ ಲಕ್ಷಣಗಳಿವೆ.
ಕರಾವಳಿ: ದಕ್ಷಿಣ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಮಳೆ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮಧ್ಯಾಹ್ನದ ನಂತರ ಅಲ್ಲಲ್ಲಿ ಮೋಡದ ವಾತಾವರಣ ಕಂಡುಬರುವ ಸಾಧ್ಯತೆಯಿದೆ.
ಸಂಜೆ ಮತ್ತು ರಾತ್ರಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಜಿಲ್ಲೆಯ ಒಂದೆರಡು ಕಡೆ ತುಂತುರು ಮಳೆಯಾಗಬಹುದು. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೋಡದ ವಾತಾವರಣ ಮಾತ್ರ ಇರಬಹುದಾಗಿದ್ದು, ಸದ್ಯಕ್ಕೆ ಮಳೆಯ ಸಾಧ್ಯತೆ ಕಡಿಮೆಯಿದೆ. ಪ್ರಸ್ತುತ ಮುನ್ಸೂಚನೆಯಂತೆ ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 28 ರವರೆಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ.
ಮಲೆನಾಡು: ಹಲವು ಜಿಲ್ಲೆಗಳಲ್ಲಿ ಸಂಜೆ ಮಳೆ : ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ, ಹಾಸನ ಜಿಲ್ಲೆಯ ಸಕಲೇಶಪುರ ಸುತ್ತಮುತ್ತ ಹಾಗೂ ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಜಿಲ್ಲೆಗಳಲ್ಲಿಯೂ ನವೆಂಬರ್ 28ರವರೆಗೆ ಮಳೆಯ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.
ಉತ್ತರ ಒಳನಾಡು: ಮೋಡದ ವಾತಾವರಣ, ಮಳೆಯ ಸಾಧ್ಯತೆ ಕಡಿಮೆ : ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಧ್ಯಾಹ್ನದ ನಂತರ ಅಲ್ಲಲ್ಲಿ ಮೋಡದ ವಾತಾವರಣ ಕಂಡುಬರುವ ಸಾಧ್ಯತೆಯಿದೆ. ಆದರೆ ಸದ್ಯಕ್ಕೆ ಮಳೆಯ ಸಾಧ್ಯತೆಗಳು ಕಡಿಮೆಯಾಗಿವೆ.
ನವೆಂಬರ್ 28ರವರೆಗೆ ಉತ್ತರ ಒಳನಾಡಿನ ವಿವಿಧ ಭಾಗಗಳಲ್ಲಿ ಮೋಡದ ವಾತಾವರಣ ಮುಂದುವರಿಯಬಹುದು. ಈಗಿನ ಮುನ್ಸೂಚನೆಯಲ್ಲಿ ಮಳೆಯ ಸ್ಪಷ್ಟ ಸೂಚನೆಗಳಿಲ್ಲ. ಆದರೂ ಹವಾಮಾನ ಪರಿಸ್ಥಿತಿ ಬದಲಾಗುವ ಸಾಧ್ಯತೆ ಇರುವುದರಿಂದ ಆಯಾ ದಿನದ ಮುನ್ಸೂಚನೆಯನ್ನು ಗಮನಿಸಬೇಕು.
ದಕ್ಷಿಣ ಒಳನಾಡು: ಹಲವು ಜಿಲ್ಲೆಗಳಲ್ಲಿ ಮಳೆ; ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಮುಂಜಾನೆಯೇ ತುಂತುರು : ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬೆಳಗ್ಗಿನಿಂದಲೇ ಮೋಡದ ವಾತಾವರಣ ಇರಲಿದೆ. ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮುಂಜಾನೆಯೇ ತುಂತುರು ಮಳೆ ಆರಂಭವಾಗಿದೆ.
ಮಧ್ಯಾಹ್ನದ ನಂತರ ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಕೆಲವು ಭಾಗಗಳಲ್ಲಿ ತುಂತುರು ಮಳೆ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ.
ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಅನಿರೀಕ್ಷಿತ ತುಂತುರು ಮಳೆಯ ಸಾಧ್ಯತೆಯನ್ನೂ ತಳ್ಳಿಹಾಕುವಂತಿಲ್ಲ.
ಪ್ರಸ್ತುತ ಮುನ್ಸೂಚನೆಯಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನವೆಂಬರ್ 27ರವರೆಗೆ ಮಳೆ ಮುಂದುವರಿಯುವ ಲಕ್ಷಣಗಳಿವೆ.
ನ.29ರಿಂದ ಮತ್ತೆ ಒಣ ಹವೆಯ ಸಾಧ್ಯತೆ : ನವೆಂಬರ್ 29ರಿಂದ ಅರಬ್ಬಿ ಸಮುದ್ರದ ಗಾಳಿಯ ದಿಕ್ಕಿನಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದೆ. ಉತ್ತರ ಭಾರತದ ಕಡೆಯಿಂದ ಶುಷ್ಕ ಗಾಳಿ ದಕ್ಷಿಣದತ್ತ ಬೀಸುವ ಹಾಗೂ ಬಂಗಾಳಕೊಲ್ಲಿಯಲ್ಲಿಯೂ ಗಾಳಿಯ ಚಲನೆ ದಕ್ಷಿಣಾಭಿಮುಖವಾಗುವ ಮುನ್ಸೂಚನೆ ಇದೆ. ಇದರಿಂದ ಕರ್ನಾಟಕದಲ್ಲಿ ಮಳೆಯ ವಾತಾವರಣ ಕಡಿಮೆಯಾಗಿ ಮತ್ತೆ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ.
ರೈತರು ಗಮನಿಸಬೇಕಾದ ಅಂಶ : ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ ಕೆಲವು ದಿನ ಮಳೆಯ ಸಾಧ್ಯತೆ ಇರುವುದರಿಂದ ಸ್ಥಳೀಯ ಹವಾಮಾನಕ್ಕೆ ಅನುಗುಣವಾಗಿ ಯೋಜಿಸಬೇಕು. ಗುಡುಗು ಸಹಿತ ಮಳೆಯ ಸಂದರ್ಭದಲ್ಲಿ ತೆರೆದ ಪ್ರದೇಶಗಳಲ್ಲಿ ಕೆಲಸ ಮಾಡುವುದನ್ನು ತಪ್ಪಿಸಿ, ಸುರಕ್ಷಿತ ಸ್ಥಳದಲ್ಲಿರುವುದು ಉತ್ತಮ.
ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಫಾಲೋಮಾಡಲು ಇಲ್ಲಿ ಕ್ಲಿಕ್ ಮಾಡಿ


