ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಕೆರೆಗಳ ಒತ್ತುವರಿ ತೆರವು ಪ್ರಗತಿ ಪರಿಶೀಲನೆ ನಡೆಸಿದ ಅವರು, ರಾಷ್ಟ್ರೀಯ ಹಸಿರು ಪ್ರಾಧಿಕಾರದ ಆದೇಶದಂತೆ ಜಿಲ್ಲಾ ಮಟ್ಟದಲ್ಲಿ ಸಮಿತಿ ರಚಿಸಲಾಗಿದೆ. ಎಲ್ಲಾ ಕೆರೆಗಳ ಸರ್ವೇ ಕಾರ್ಯವನ್ನು ಹಂತ ಹಂತವಾಗಿ ಪೂರ್ಣಗೊಳಿಸಲು ಎಲ್ಲಾ ತಹಶೀಲ್ದಾರ್‌ಗಳು ಕ್ರಮ ವಹಿಸಬೇಕು. ಪ್ರತಿ ತಿಂಗಳು ಗುರಿ ನಿಗದಿಪಡಿಸಿ ಕೆರೆಗಳ ಒತ್ತುವರಿ ತೆರವುಗೊಳಿಸಿ ವರದಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.ಮತ್ತೆ ಕೆರೆಗಳ ಒತ್ತುವರಿಯಾದರೆ ಆಯಾ ಅಧಿಕಾರಿಯನ್ನು ಹೊಣೆಗಾರರನ್ನಾಗಿಸಿ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 2520 ಕೆರೆಗಳಿದ್ದು, ಒತ್ತುವರಿ ಸಂಬಂಧ ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇವೆ. ಜಿಲ್ಲಾ ವ್ಯಾಪ್ತಿಯಲ್ಲಿ ಕೆರೆಗಳ ತೆರವು ಮಾಡಿರುವ ಕುರಿತು ನ್ಯಾಯಾಲಯಕ್ಕೆ ಮಾಹಿತಿ ನೀಡಬೇಕಿದ್ದು, ತೆರವು ಕಾರ್ಯಾಚರಣೆ ತ್ವರಿತವಾಗಿ ನಡೆಯಬೇಕು ಎಂದು ಸೂಚನೆ ನೀಡಿದ್ದಾರೆ.