ಮಹಾರಾಷ್ಟ್ರದಲ್ಲಿ ಧಾರಕಾರ ಮಳೆಯಾಗುತ್ತಿರುವುದರಿಂದ ಉಜನಿ ಆಣೆಕಟ್ಟೆಯಿಂದ ಹರಿದು ಬರುತ್ತಿರುವ ನೀರಿನಿಂದಾಗಿ ಯಾದಗಿರಿ ನಗರದ ಭೀಮಾ ನದಿ ತುಂಬಿ ಹರಿಯುತ್ತಿದೆ. ಉಜಿನಿ ಜಲಾಶಯದಿಂದ 2.54 ಲಕ್ಷ ಕ್ಯೂಸೆಕ್ ನೀರು ಹರಿ ಬಿಡಲಾಗುತ್ತಿದೆ. ಇದರಿಂದ ಸನ್ನತಿ ಬ್ರಿಡ್ಜ್ ಕಂ ಬ್ಯಾರೇಜ್ ನಿಂದಲೂ 3.50 ಲಕ್ಷ ಕ್ಯೂಸೆಕ್ ನೀರು ನದಿಗೆ ಹರಿಬಿಡಲಾಗಿದೆ. ಕ್ರಸ್ಟ್ ಗೇಟ್‌ಗಳನ್ನು ಮೇಲಕ್ಕೆ ಎತ್ತಿ ನೀರು ಹರಿಸಲಾಗುತ್ತಿದೆ. ಇದರಿಂದ ನದಿ ಪಾತ್ರದ ಎರಡೂ ಕಡೆಯ ಜಮೀನುಗಳಿಗೆ ನೀರು ನುಗ್ಗಿದೆ. ಹಳ್ಳಗಳಿಗೂ ಪ್ರವಾಹದ ನೀರು ವ್ಯಾಪಿಸಿಕೊಂಡು ಬೆಳೆದು ನಿಂತ ಭತ್ತ, ಹತ್ತಿ, ತೊಗರಿ ಬೆಳೆಗಳು ಜಲಾವೃತವಾಗಿದೆ. 3.50 ಲಕ್ಷ ಕ್ಯೂಸೆಕ್ ನೀರು ನದಿಗೆ ಹರಿಸುತ್ತಿರುವುದರಿಂದ ಹೆಡಗಿಮದ್ರಾ, ತಳಕ, ಮುಷ್ಟುರು, ಮಲ್ಹಾರ್, ಆನೂರು, ಗೌಡೂರು, ಹನೂರು (ಕೆ), ಭೀಮನಳ್ಳಿ ಸೇರಿದಂತೆ ನದಿ ಪಾತ್ರದ ಗ್ರಾಮಗಳ ಜಮೀನುಗಳಿಗೆ ನೀರು ನುಗ್ಗಿದೆ ಎಂದು ಯಾದಗಿರಿ ತಹಶೀಲ್ದಾರ್ ಸುರೇಶ ಅಂಕಲಗಿ ತಿಳಿಸಿದ್ದಾರೆ.
ಜನರು ನದಿ, ಹಳ್ಳಗಳಿಗೆ ಇಳಿಯಬಾರದು ಎಂದು ನಗರಸಭೆ ಅಧ್ಯಕ್ಷೆ ಲಲಿತಾ ಮನವಿ ಮಾಡಿದ್ದಾರೆ. ಶೀಘ್ರವೇ ರೈತರಿಗೆ ಸೂಕ್ತ ಪರಿಹಾರ ಕಲ್ಪಿಸಲಾಗುವುದು ಎಂದು ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ತಿಳಿಸಿದ್ದಾರೆ. ವಡಗೇರಾ ತಾಲ್ಲೂಕಿನ ಜೋಳದಡಗಿ, ಶಿವನೂರು ಗ್ರಾಮದಲ್ಲಿ ಬೆಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಭೀಮಾನದಿಗೆ 3.50 ಲಕ್ಷ ಕ್ಯೂಸೆಕ್ ನೀರು ಬಿಟ್ಟಿದ್ದರಿಂದ ಯಾದಗಿರಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ 22 ಕ್ಕೂ ಹೆಚ್ಚು ಗ್ರಾಮಗಳಲ್ಲಿನ ಬೆಳೆ ಹಾನಿಯಾಗಿದೆ. ಸಮೀಕ್ಷೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಹೆಚ್ಚಿನ ಬೆಳೆ ಪರಿಹಾರಕ್ಕಾಗಿ ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ಯಾದಗಿರಿ ಜಿಲ್ಲೆಯ ಗುರುಮಠಕಲ್ ಮತಕ್ಷೇತ್ರದ ಶಾಸಕ ಶರಣಗೌಡ ಕಂದಕೂರ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.

