ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು ರದ್ದು ಮಾಡುವ ಅವಕಾಶವನ್ನು ಕೇಂದ್ರ ಸರ್ಕಾರದ “ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ 2007” ನೀಡಿದೆ ಎಂದು ಕೃಷ್ಣ ಬೈರೇಗೌಡ ವಿಧಾನಪರಿಷತ್‌ನಲ್ಲಿ ತಿಳಿಸಿದ್ದಾರೆ.
“ಹಿರಿಯ ನಾಗರೀಕರ ದೂರು ಸಾಬೀತಾದರೆ, ತಂದೆ ತಾಯಿಯಿಂದ ಆಸ್ತಿ ಪಡೆದು ಅವರ ಆರೈಕೆ ಮಾಡದಿದ್ದರೆ, ವಿಲ್ ಅಥವಾ ದಾನಪತ್ರವನ್ನು ರದ್ದುಗೊಳಿಸಿ ಮತ್ತೆ ಪೋಷಕರ ಹೆಸರಿಗೇ ಮರುಸ್ಥಾಪಿಸಲು ಕಾನೂನಿನಲ್ಲಿ ಅವಕಾಶ ಇದೆ. ಈ ಜವಾಬ್ದಾರಿಯನ್ನು ಉಪ ವಿಭಾಗಾಧಿಕಾರಿಗಳಿಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ತಮ್ಮ ವಿಭಾಗದ ಅನ್ಯ ಯೋಜನೆಗಳ ಮಾಹಿತಿ ನೀಡಿದ ಸಚಿವರು, ಗ್ರಾಮ ಹಾಗೂ ತಾಲ್ಲೂಕು ಮಟ್ಟದ ಭೂದಾಖಲೆಗಳನ್ನು ತಾಳೆ ಮಾಡಿ ಕ್ರಮಬದ್ಧಗೊಳಿಸುವ ಜಮಾಬಂದಿ ಪ್ರಕ್ರಿಯೆಯನ್ನು ವೇಗವಾಗಿ ನಿರ್ವಹಿಸಲು ಇ-ಜಮಾಬಂದಿ ತಂತ್ರಾಂಶವನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ. ಕುಡಿಯುವ ನೀರು, ವಸತಿ, ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ನರೇಗಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ದೃಢಪಡಿಸುವುದು ಹಾಗೂ ಗ್ರಾಮ ಪಂಚಾಯತಿ ಆಡಳಿತದಲ್ಲಿ ಪಾರದರ್ಶಕತೆ ತರುವುದು ಜಮಾಬಂದಿ ಯೋಜನೆಯ ಉದ್ದೇಶವಾಗಿದೆ ಎಂದು ಮಾಹಿತಿ ನೀಡಿದ್ದಾರೆ.