ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕಾಗುವ ಬಗ್ಗೆ ಹಮಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿ ಭಾಗ ಮತ್ತು ಮಲೆನಾಡಿನಲ್ಲಿಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಹೇಳಿದೆ. ಮಲೆನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಲಘು ಮಳೆಯಾಗುವ ಸಾಧ್ಯತೆಯಿದೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆ ಮುಂದುವರೆದಿದ್ದು ಉಜನಿ ಹಾಗೂ ವೀರ್ ಜಲಾಶಯಗಳಿಂದ ಭೀಮಾನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ.
ಮಹಾರಾಷ್ಟ್ರದಿಂದ ಒಟ್ಟು 1,20,000 ಕ್ಯೂಸೆಕ್ ನೀರು ಭೀಮಾ ನದಿಗೆ ಹರಿಸಿದ್ದರಿಂದ ವಿಜಯಪುರ ಜಿಲ್ಲೆಯಲ್ಲಿ ಭೀಮಾ ನದಿ ಉಕ್ಕಿ ಹರಿಯುತ್ತಿದೆ. ಚಡಚಣ ತಾಲೂಕಿನಲ್ಲಿ ಭೀಮಾನದಿಗೆ ಅಡ್ಡಲಾಗಿ ಕಟ್ಟಿರುವ ಉಮರಾಣಿ- ಲವಗಿ ಬ್ಯಾರೇಜ್ ಮುಳುಗಡೆಯಾಗಿದೆ. ಭಾರೀ ನೀರು ಹರಿಯುತ್ತಿರುವುದರಿಂದ ಜಿಲ್ಲೆಯ ಭೀಮಾ ನದಿ ಪಾತ್ರದ ಜನರಲ್ಲಿ ಆತಂಕ ಶುರುವಾಗಿದೆ. ಚಡಚಣ, ಇಂಡಿ, ಆಲಮೇಲ, ಸಿಂದಗಿ ತಾಲೂಕುಗಳಲ್ಲಿ ಪ್ರವಾಹದ ಭೀತಿ ಶುರುವಾಗಿದೆ.
ದಕ್ಷಿಣ ಒಳನಾಡಿನ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗದಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಇಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಂತೆಯೇ ಕೊಡಗು, ಚಿಕ್ಕಮಗಳೂರು ಮತ್ತು ಬೆಳಗಾವಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ. ಅಂತೆಯೇ ಕರಾವಳಿಯ ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ಬಳ್ಳಾರಿ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು ಹಾಗೂ ದಾವಣಗೆರೆ, ಕೋಲಾರ, ವಿಜಯನಗರದಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಳಗಾವಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಯಾದಗಿರಿ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆಯಲ್ಲಿ ಮಳೆಯಾಗಲಿದೆ. ಇನ್ನು ಭಾನುವಾರ ಬಿಸಿಲ ವಾತಾವರಣಕ್ಕೆ ಸಾಕ್ಷಿಯಾಗಿದ್ದ ರಾಜಧಾನಿ ಬೆಂಗಳೂರಿನಲ್ಲಿ ಇಂದು ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ.
- ಅಂತರ್ಜಾಲ ಮಾಹಿತಿ