ಮಾವು ಬೆಳೆಗಾರರಿಗಾಗಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತೋಟಗಾರಿಕೆ ಕಚೇರಿ ಸಮೀಪದ ಮಾರುತಿ ಸಭಾ ಭವನದಲ್ಲಿ ನಾಳೆ ಮಾವು ಬೆಳೆ ವಿಮೆ ಕಾರ್ಯಾಗಾರ ನಡೆಯಲಿದೆ. ಈ ಕಾರ್ಯಾಗಾರವನ್ನು ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ, ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಮಾವು ಬೆಳೆಗಾರರ ಸಂಘದ ಸಹಯೋಗದಲ್ಲಿ ಆಯೋಜಿಸಲಾಗಿದೆ.
ಕಾರ್ಯಾಗಾರದಲ್ಲಿ ಮಾವು ಬೆಳೆಯ ಸಮಗ್ರ ಪೋಷಕಾಂಶ ನಿರ್ವಹಣೆ, ಕೀಟ ಹಾಗೂ ರೋಗ ನಿಯಂತ್ರಣ ಕ್ರಮಗಳು, ರಫ್ತು ಮಾರುಕಟ್ಟೆಗೆ ಉತ್ತೇಜನ ಮತ್ತು ಬೆಳೆ ವಿಮೆ ಸೌಲಭ್ಯಗಳ ಕುರಿತು ತಜ್ಞರಿಂದ ಮಾಹಿತಿ ನೀಡಲಾಗುತ್ತದೆ. ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷ ಡಾ. ಬಿ.ಸಿ. ಮುದ್ದು ಗಂಗಾಧರ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಲಾಲ್ಬಾಗ್ ತೋಟಗಾರಿಕೆ ನಿವೃತ್ತ ಹೆಚ್ಚುವರಿ ನಿರ್ದೇಶಕ ಎಸ್.ವಿ. ಹಿತ್ತಲಮನಿ ಅವರು ಮಾವು ಬೆಳೆಯ ಸಮಗ್ರ ಪೋಷಕಾಂಶ ನಿರ್ವಹಣೆ ಕುರಿತು ವಿಷಯ ಮಂಡಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮಾವು ಬೆಳೆಗಾರರು ಈ ಕಾರ್ಯಾಗಾರದಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳುವಂತೆ ತೋಟಗಾರಿಕೆ ಉಪ ನಿರ್ದೇಶಕ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.




