ವಿಶ್ವದ ಭೂಪಟದಲ್ಲಿ ಭಾರತೀಯ ರೈಲ್ವೆ ಇಲಾಖೆಯನ್ನು ಐದನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಕೊಂಡೊಯ್ಯುವ ಗುರಿ ಹೊಂದಲಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ 7 ಲಕ್ಷಕ್ಕೂ ಅಧಿಕ ಉದ್ಯೋಗ ಸೃಷ್ಟಿ ಮಾಡುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಲಾಗಿದೆ ಎಂದು ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ವಿ.ಸೋಮಣ್ಣ, 44 ಸಾವಿರ ರೈಲ್ವೆ ಡಬ್ಬಲ್ ಲೈನ್‌ಗಳಿಗೆ ವಿದ್ಯುತ್ ಸಂಪರ್ಕ ನೀಡಿ, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. ದೇಶದ 24 ರಾಜ್ಯಗಳ 294 ಜಿಲ್ಲಾ ಕೇಂದ್ರಗಳಲ್ಲಿ 104 ವಂದೇ ಭಾರತ್ ರೈಲುಗಳು ಈಗಾಗಲೇ ಸಂಚರಿಸುತ್ತಿವೆ. ಕರ್ನಾಟಕದಲ್ಲಿ ಈಗಾಗಲೇ 10 ವಂದೇ ಭಾರತ್ ರೈಲುಗಳು ಸಂಚರಿಸುತ್ತಿವೆ. ಜೊತೆಗೆ ಪ್ರತಿ ರೈಲಿಗೆ ನಾಲ್ಕರಂತೆ ಹೊಸದಾಗಿ 30 ಸಾವಿರ ಹೊಸ ಬೋಗಿಗಳನ್ನು ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದರು. ತುಮಕೂರಿನಿಂದ ಬೆಂಗಳೂರಿಗೆ ಹೊಸದಾಗಿ ಮೆಮೊ ರೈಲು ಸಂಚಾರ ಆರಂಭಿಸಲಾಗಿದೆ. ಹಾಸನದಿಂದ ಬೆಂಗಳೂರಿಗೆ ಇರುವ ಪ್ರಯಾಣ ದರ ತಗ್ಗಿಸಲು ಚಿಂತಿಸಲಾಗಿದೆ ಎಂದು ಸಚಿವ ವಿ.ಸೋಮಣ್ಣ ತಿಳಿಸಿದರು.