ಪ್ರಸಾದ್ (PRASAD) ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆ ಮತ್ತು ಧಾರ್ಮಿಕ ಮಹತ್ವಕ್ಕೆ ಯಾವುದೇ ರೀತಿಯ ಧಕ್ಕೆಯಾಗದಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಸ್ಪಷ್ಟಪಡಿಸಿದರು.
ಚಾಮುಂಡಿ ಬೆಟ್ಟದ ಅಭಿವೃದ್ಧಿ ಯೋಜನೆಗಳ ಪರಿಶೀಲನೆ ವೇಳೆ ಮಾತನಾಡಿದ ಅವರು, ಐತಿಹಾಸಿಕ ಹಾಗೂ ಧಾರ್ಮಿಕ ಹಿನ್ನೆಲೆ ಹೊಂದಿರುವ ಈ ಪ್ರದೇಶದ ಮೂಲ ಸ್ವರೂಪವನ್ನು ಕಾಪಾಡಿಕೊಂಡು, ಭಕ್ತರು ಮತ್ತು ಪ್ರವಾಸಿಗರಿಗೆ ಉತ್ತಮ ಮೂಲಸೌಕರ್ಯ ಒದಗಿಸುವುದೇ ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದರು.
ಪ್ರಸಾದ್ ಯೋಜನೆಯಡಿ ದೇವಾಲಯದ ಸುತ್ತಮುತ್ತ ಸ್ವಚ್ಛತೆ, ಕುಡಿಯುವ ನೀರು, ಪಾದಚಾರಿ ಮಾರ್ಗ, ಬೆಳಕು ವ್ಯವಸ್ಥೆ, ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಸೇರಿದಂತೆ ಹಲವು ಕಾರ್ಯಗಳನ್ನು ಹಂತ ಹಂತವಾಗಿ ಜಾರಿಗೆ ತರಲಾಗುತ್ತಿದೆ. ಈ ಎಲ್ಲ ಅಭಿವೃದ್ಧಿ ಕಾರ್ಯಗಳು ಪಾರಂಪರಿಕ ಮೌಲ್ಯಗಳು ಮತ್ತು ಪರಿಸರ ಸಮತೋಲನವನ್ನು ಗಮನದಲ್ಲಿಟ್ಟುಕೊಂಡೇ ನಡೆಯಲಿವೆ ಎಂದು ಸಚಿವರು ತಿಳಿಸಿದರು.
ಚಾಮುಂಡಿ ಬೆಟ್ಟವು ಕೇವಲ ಧಾರ್ಮಿಕ ಕೇಂದ್ರವಷ್ಟೇ ಅಲ್ಲದೆ, ಮೈಸೂರಿನ ಸಾಂಸ್ಕೃತಿಕ ಗುರುತಾಗಿದ್ದು, ಇದರ ಐತಿಹಾಸಿಕತೆ ಉಳಿಯುವಂತೆ ಅಭಿವೃದ್ಧಿ ಅಗತ್ಯವಾಗಿದೆ ಎಂದು ಮಹದೇವಪ್ಪ ಹೇಳಿದರು. ಸರ್ಕಾರದ ಈ ಯೋಜನೆಯಿಂದ ಭಕ್ತರು ಹಾಗೂ ಪ್ರವಾಸಿಗರಿಗೆ ಸುಲಭ ಪ್ರವೇಶ, ಉತ್ತಮ ಅನುಭವ ದೊರಕಲಿದ್ದು, ಮೈಸೂರಿನ ಪ್ರವಾಸೋದ್ಯಮಕ್ಕೂ ಮತ್ತಷ್ಟು ಉತ್ತೇಜನ ದೊರೆಯಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾತನಾಡಿ, ಪ್ರಸಾದ್ ಯೋಜನೆಯಡಿ 45 ಕೋಟಿ 70 ಲಕ್ಷ ಅನುದಾನ ಮಂಜೂರಾಗಿದ್ದು, ಸುಗಮ ದರ್ಶನಕ್ಕೆ ವ್ಯವಸ್ಥೆ ಮಾಡಲು ಸರತಿ ಸಾಲಿಗೆ ಕಲ್ಲಿನ ಕ್ಯೂ ಮಂಟಪ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.



