ಸಂಸದರ ಆದರ್ಶ ಗ್ರಾಮದಡಿ ಆಯ್ಕೆಯಾಗಿರುವ ಕಡಬ ತಾಲೂಕಿನ ಬಳ್ಪ ಗ್ರಾಮದ ಸಂಪೂರ್ಣ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳ ಅನುಷ್ಠಾನಕ್ಕೆ 60 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಸಂಸದರ ಆದರ್ಶ ಗ್ರಾಮದ ಅಡಿಯಲ್ಲಿ ದೇಶದ ಯಾವುದೇ ಗ್ರಾಮದಲ್ಲೂ 60 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿಲ್ಲ. ಜಿಲ್ಲೆಯ ಬಳ್ಪ ಗ್ರಾಮದಲ್ಲಿ ಮಾತ್ರ ಇಷ್ಟು ಮೊತ್ತದ ಹಣವನ್ನು ಖರ್ಚು ಮಾಡಲಾಗುತ್ತಿದೆ. ಅಲ್ಲಿ ಪೂರ್ಣಗೊಂಡಿರುವ ಕಾಮಗಾರಿಗಳನ್ನು ಸೆ.2 ರಂದು ಲೋಕಾರ್ಪಣೆ ಮಾಡಲಾಗುವುದು ಹಾಗೂ ಬಾಕಿ ಉಳಿದ ಕಾಮಗಾರಿಗಳಿಗೆ ಶಿಲನ್ಯಾಸ ನೆರವೇರಿಸಲು ಪಟ್ಟಿ ಸಿದ್ದಪಡಿಸುವಂತೆ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಅವರು ಮಂಗಳವಾರ ಮಂಗಳೂರು ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಸದರ ಆದರ್ಶ ಗ್ರಾಮದಡಿ ಆಯ್ಕೆಯಾಗಿರುವ ಕಡಬ ತಾಲೂಕಿನ ಬಳ್ಪ ಗ್ರಾಮದ ಸಂಪೂರ್ಣ ಅಭಿವೃದ್ಧಿಗಾಗಿ ಹಲವಾರು ಕಾಮಗಾರಿಗಳು ಹಾಗೂ ವಿವಿಧ ಯೋಜನೆಗಳ ಅನುಷ್ಠಾನಕ್ಕೆ 60 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಬರುವ ಸೆಪ್ಟಂಬರ್ 2ರಂದು ಅಲ್ಲಿ ಪೂರ್ಣಗೊಂಡಿರುವ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಇನ್ನೂ ನೆರವೇರಿಸಬೇಕಾಗಿರುವ ಕಾಮಗಾರಿಗಳಿಗೆ ಶಿಲನ್ಯಾಸ ನೆರವೇರಿಸಲು ಪಟ್ಟಿಯೊಂದನ್ನು ಸಿದ್ದಪಡಿಸುವಂತೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಬಳ್ಪ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿದರು.
ಕಲ್ಲಡ್ಕ ಫ್ಲೈ ಓವರ್ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಸಂಸದರು ಸೂಚಿಸಿದಾಗ, ಮುಂದಿನ ವರ್ಷದ ಅಕ್ಟೋಬರ್ ಅಥವಾ ನವೆಂಬರ್ ನಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ ತಿಳಿಸಿದರು.
ಜಿಲ್ಲೆಗೊಂದು ಗೋಶಾಲೆ ಸ್ಥಾಪನೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 47.50 ಲಕ್ಷ ರೂ.ಗಳು ಬಿಡುಗಡೆಯಾಗಿವೆ, 10 ಎಕರೆ ಜಾಗಕ್ಕೆ ತಂತಿ ಮೇಲೆ ಅಳವಡಿಸಲಾಗುತ್ತಿದ್ದು, ಈಗಾಗಲೇ ಎರಡು ಕೊಳವೆ ಬಾವಿಗಳನ್ನು ಕೊರೆಸಲಾಗಿದೆ, ಅವುಗಳಲ್ಲಿ ನೀರು ಲಭಿಸಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಸಭೆಗೆ ಮಾಹಿತಿ ನೀಡಿದರು.
ಲೋಕೋಪಯೋಗಿ ಇಲಾಖೆ ವತಿಯಿಂದ ಎಸ್‍ಸಿಪಿ-ಟಿಎಸ್‍ಪಿ ಯೋಜನೆಯಡಿ ಬಾಕಿ ಉಳಿದಿದ್ದ ಕಾಮಗಾರಿಗಳು ಮಳೆಯಿಂದಾಗಿ ತಡೆಹಿಡಿಯಲಾಗಿದ್ದು, ಮುಂದಿನ ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಯಶವಂತ್ ಸಭೆಗೆ ತಿಳಿಸಿದರು.
ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ ಕುರಿತಂತೆ, ಮುಂಬರುವ ಸೆಪ್ಟೆಂಬರ್ 15ರೊಳಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ನಂತರ ಪಾರ್ಕ್ ಸ್ಥಾಪನೆಯ ಪ್ರಕ್ರಿಯೆಗಳು ಶೀಘ್ರವಾಗಲಿವೆ ಎಂದು ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಗೋಕುಲ್ ದಾಸ್ ನಾಯಕ್ ವಿವರಿಸಿದರು.
ಮಹಾತ್ಮ ಗಾಂಧಿ ಗ್ರಾಮೀಣ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಗೆ 2022ರ ಜೂನ್ ಮಾಹೆಗೆ ನಿಗದಿ ಪಡಿಸಲಾಗಿದ್ದ ಗುರಿಯನ್ನು ಸಾಧಿಸಲಾಗಿದೆ, ಈ ಯೋಜನೆಯಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಂದು ಕೆರೆ ಅಭಿವೃದ್ಧಿ ಪಡಿಸುವ ಹಾಗೂ ಶಾಲೆಯ ಕ್ರೀಡಾಂಗಣವನ್ನು ನಿರ್ಮಿಸುವ ಗುರಿ ಹೊಂದಲಾಗಿದೆ, ಕೆರೆಗಳ ಅಭಿವೃದ್ಧಿ ಹಾಗೂ ನಮ್ಮ ಹೊಲ ನಮ್ಮ ರಸ್ತೆ ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ 5 ಕಿ.ಮೀ.ಗಳ ರಸ್ತೆ ಅಭಿವೃದ್ಧಿಪಡಿಸುವ ಕೆಲಸ ಆಗುತ್ತಿದೆ, ಶಾಲೆಗಳಲ್ಲಿ ಮಕ್ಕಳ ಶೌಚಾಲಯವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 174 ಶಾಲೆಗಳಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ, ಅಂಗನವಾಡಿಗಳಲ್ಲಿ ಕಾಂಪೌಂಡ್ ನಿರ್ಮಾಣ ಕಾರ್ಯ ಆರಂಭಗೊಂಡಿದೆ ಎಂದು ಡಾ. ಕುಮಾರ್ ತಿಳಿಸಿದರು.
ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಪ್ರಧಾನ ಮಂತ್ರಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ಇದುವರೆಗೂ ಕೈಗೊಂಡ ಕಾಮಗಾರಿಗಳಲ್ಲಿ ಪೂರ್ಣಗೊಂಡ ಕಾಮಗಾರಿಗಳ ಪಟ್ಟಿಗಳನ್ನು ನೀಡುವಂತೆ ಸಂಸದರು ತಿಳಿಸಿದರು. ಈ ಕಾಮಗಾರಿಗಳನ್ನು ಪ್ರಧಾನ ಮಂತ್ರಿಗಳಿಂದ ಉದ್ಘಾಟಿಸಲು ಅನುಕೂಲವಾಗುವುದು ಹಾಗಾಗಿ ಕೂಡಲೇ ಪಟ್ಟಿ ಒದಗಿಸುವಂತೆ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ತಿಳಿಸಿದರು.
ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ವೇದಿಕೆಯಲ್ಲಿದ್ದರು. ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ದಿಶಾ ಸಮಿತಿಯ ನಾಮನಿರ್ದೇಶಿತ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.