2031ರೊಳಗೆ ದೇಶಾದ್ಯಂತ ನೈಸರ್ಗಿಕ ಕೃಷಿಯನ್ನು ವಿಸ್ತರಿಸುವ ಉದ್ದೇಶದೊಂದಿಗೆ ಗ್ರಾಮೀಣಾಭಿವೃದ್ಧಿ ಸಚಿವಾಲಯದ ವತಿಯಿಂದ ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ಸ್ವ-ಸಹಾಯ ಗುಂಪುಗಳ ನೇತೃತ್ವದಲ್ಲಿ ನೈಸರ್ಗಿಕ ಕೃಷಿ ಕುರಿತ ರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ ನೀಡಲಾಯಿತು. ಸಮಾವೇಶಕ್ಕೆ ಚಾಲನೆ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದರು.
ಈ ವೇಳೆ ಮಾತನಾಡಿದ ಡಾ. ಶರಣ ಪ್ರಕಾಶ್ ಪಾಟೀಲ್, ಮಹಿಳೆಯರ ಮೂಲಕ ಸಮಾಜದಲ್ಲಿ ಯಾವುದೇ ಬದಲಾವಣೆ ಸಾಧ್ಯ ಎಂಬ ನಂಬಿಕೆ ಕರ್ನಾಟಕ ಸರ್ಕಾರಕ್ಕಿದ್ದು, ಮಹಿಳೆಯರ ಬದುಕಿಗೆ ಸುಸ್ಥಿರತೆ ಒದಗಿಸುವ ನಿಟ್ಟಿನಲ್ಲಿ ಗೃಹ ಲಕ್ಷ್ಮಿ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದಿರುವುದಾಗಿ ತಿಳಿಸಿದರು.
ಗ್ರಾಮೀಣಾಭಿವೃದ್ಧಿ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಅನಿಲ್ ಕುಮಾರ್ ಮಾತನಾಡಿ, ನೈಸರ್ಗಿಕ ಕೃಷಿ ಪ್ರತಿಯೊಂದು ರಾಜ್ಯದಲ್ಲೂ ಸವಾಲಾಗಿದ್ದು, ಸಮಾವೇಶದಲ್ಲಿ ಕೇವಲ ಚರ್ಚೆಗಷ್ಟೇ ಸೀಮಿತವಾಗದೇ, ಅದನ್ನು ನೆಲಮಟ್ಟದಲ್ಲಿ ಹೇಗೆ ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂಬ ಕುರಿತು ಫಲಪ್ರದ ಚಿಂತನೆ ನಡೆಯಬೇಕಾಗಿದೆ ಎಂದು ಹೇಳಿದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮಾತನಾಡಿ , ಮಣ್ಣಿನ ಗುಣಮಟ್ಟವನ್ನು ಕಾಪಾಡಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ರೈತರು ನೈಸರ್ಗಿಕ ಕೃಷಿಯಲ್ಲಿ ತೊಡಗಿಸಿಕೊಳ್ಳಬೇಕಾಗಿದ್ದು, ಈ ಕೃಷಿ ಪದ್ಧತಿಯ ಲಾಭಗಳ ಕುರಿತು ರೈತರಲ್ಲಿ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ ಎಂದರು.
ದೇಶದ ವಿವಿಧ ಭಾಗಗಳಿಂದ ಆಗಮಿಸಿರುವ ಪ್ರತಿನಿಧಿಗಳು ಸಮಾವೇಶದಲ್ಲಿ ಪಾಲ್ಗೊಂಡು, ನೈಸರ್ಗಿಕ ಕೃಷಿಗೆ ಸಂಬಂಧಿಸಿದ ವಿವಿಧ ಆಯಾಮಗಳ ಕುರಿತು ಚರ್ಚೆ ನಡೆಸುತ್ತಿದ್ದಾರೆ.
ಕಾರ್ಯಕ್ರಮದಲ್ಲಿ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಉಪ ಕಾರ್ಯದರ್ಶಿ ಗುಲ್ ವೀಣಾ ಬಧಾನ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.



