21.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಕರಾವಳಿ ತೀರ ತಾಲೂಕುಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಮತ್ತೂ ಸ್ವಲ್ಪ ಕಡಿಮೆ ಇರಬಹುದು.
ಈಗಿನಂತೆ ಜುಲೈ 22 ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾದರೂ ಜುಲೈ 28 ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಜುಲೈ 29 ರಿಂದ ದಿನದಲ್ಲಿ ಒಂದೆರಡು ಮಳೆ ಮಾತ್ರ ಇರಬಹುದು.
ಮಲೆನಾಡು : ಕೊಡಗು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ತಲಕಾವೇರಿ, ಭಾಗಮಂಡಲ ಸುತ್ತಮುತ್ತ ಭಾಗಗಳಲ್ಲಿ ಮಳೆ ಹೆಚ್ಚೇ ಇರಬಹುದು. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜುಲೈ 22ರಿಂದ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ,ದಾವಣಗೆರೆ, ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ತುಂತುರು ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆ ಸ್ವಲ್ಪ ಹೆಚ್ಚಿರುವ ಮುನ್ಸೂಚನೆ ಇದ್ದು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜುಲೈ 28 ರ ತನಕವೂ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ಮಧ್ಯಮ ಸ್ತರದ ಗಾಳಿಯು ಬಂಗಾಳಕೊಲ್ಲಿಯ ಕಡೆಯಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕರಾವಳಿ ತನಕ ಬಂದು ತಿರುಗಿ ಬಂಗಾಳಕೊಲ್ಲಿಯ ಕಡೆಗೆ ಸಾಗುತ್ತಿದೆ. ಇದರ ಪರಿಣಾಮದಿಂದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕರಾವಳಿಯಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರಬಹುದು.


