ಜಮ್ಮು- ಕಾಶ್ಮೀರದ ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ ಕನ್ನಡಿಗ ಸೇರಿದಂತೆ 20 ಕ್ಕೂ ಹೆಚ್ಚು ಮಂದಿ ಪ್ರವಾಸಿಗರು ಭಯೋತ್ಪಾದಕರ ದಾಳಿಗೆ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ಕೆಲ ಪ್ರವಾಸಿಗರು ಗಾಯಗೊಂಡಿರುವುದಾಗಿ ವರದಿಯಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. …..ಮುಂದೆ ಓದಿ….
ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೂರವಾಣಿ ಮಾತುಕತೆ ನಡೆಸಿದ್ದು, ಈ ವೇಳೆ ಪ್ರಧಾನಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಪ್ರವಾಸಿಗರ ಮೇಲೆ ನಡೆದ ಘಟನೆ ಖಂಡನಾರ್ಹ. ಕೃತ್ಯದಲ್ಲಿ ಪಾಲ್ಗೊಂಡವರ ವಿರುದ್ಧ ಕಠಿಣ ಕ್ರ ಮ ಕೈಗೊಳ್ಳಲಾಗುವುದು ಎಂದು ಅಮಿತ್ ಶಾ ಹೇಳಿದ್ದಾರೆ.
ಇದೇ ವೇಳೆ ಪ್ರಧಾನಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮುಗ್ಧ ನಾಗರಿಕರ ಮೇಲೆ ಹಲ್ಲೆ ನಡೆಸಿರುವುದು ಅಮಾನವೀಯ ಎಂದು ಹೇಳಿದ್ದಾರೆ. ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಗಾಯಾಳುಗಳ ಚಿಕಿತ್ಸೆಗೆ ಸೂಕ್ತ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಘಟನೆಯನ್ನು ಖಂಡಿಸಿದ್ದಾರೆ.
ಮಂಗಳವಾರ ಮಧ್ಯಾಹ್ನದ ವೇಳೆಗೆ ಜಮ್ಮು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ವ್ಯಾಲಿಯಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯ ಹೊಣೆಯನ್ನು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರೆ ತೊಯ್ಬಾದ ಸ್ಥಳೀಯ ಬ್ರಾಂಚ್ ಆಗಿರುವ ರೆಸಿಸ್ಟೆನ್ಸ್ ಫ್ರಂಟ್ ಹೊತ್ತುಕೊಂಡಿದೆ.