ಅರಣ್ಯವಾಸಿಗಳ ಕೃಷಿ ಭೂಮಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ರೈತರು ಒಗ್ಗೂಡಿ ಸಂಯುಕ್ತ ವೇದಿಕೆ ಮೂಲಕ ಸಾಗರದ ಉಪವಿಭಾಗಾಧಿಕಾರಿ ಕಚೇರಿ ಆವರಣದಲ್ಲಿ ಅನಿರ್ಧಿಷ್ಟಾವಧಿ ಧರಣಿ ನಡೆಸಿದರು.
ಧರಣಿಯಲ್ಲಿ ಮಾತನಾಡಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಲೆನಾಡಿನಲ್ಲಿ ಸಣ್ಣ ರೈತರು ನೂರಾರು ವರ್ಷಗಳಿಂದ ಕೃಷಿ ಮಾಡಿಕೊಂಡು ಬರುತ್ತಿದ್ದಾರೆ. ಅವರನ್ನು ಏಕಾಏಕಿ ಒಕ್ಕಲೆಬ್ಬಿಸುವುದು ಸರಿಯಲ್ಲ. ಸರ್ಕಾರ ರೈತರ ಮನವಿಯನ್ನು ಆಲಿಸಿ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಹರತಾಳು ಹಾಲಪ್ಪ ಮಾತನಾಡಿ, ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವ ಕೆಲಸಕ್ಕೆ ಮುಂದಾದರೆ ಕಾಗೋಡು ಚಳವಳಿಯಂತೆ ಮತ್ತೊಂದು ಹೋರಾಟ ಆರಂಭಿಸುವುದಾಗಿ ತಿಳಿಸಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ, ಐವತ್ತು ಅರವತ್ತು ವರ್ಷಗಳಿಂದ ಅರಣ್ಯವಾಸಿಗಳು ಕೃಷಿ ಮಾಡಿಕೊಂಡು ಬರುತ್ತಿದ್ದಾರೆ. ಸರ್ಕಾರ ಮಧ್ಯ ಪ್ರವೇಶಿಸಿ ಸಮಸ್ಯೆ ಪರಿಹರಿಸಿ ಹಕ್ಕು ಪತ್ರ ನೀಡಬೇಕು ಎಂದು ಮನವಿ ಮಾಡಿದರು.
ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿದ ಸಂಸದ ಬಿ ವೈ ರಾಘವೇಂದ್ರ, ಸಮಗ್ರ ಬೇಡಿಕೆಗಳನ್ನು ಸ್ವೀಕರಿಸಿದರು. ಮುಳುಗಡೆ ಸಂತ್ರಸ್ತರಿಗೆ ಅವರ ಬೇಡಿಕೆಗಳಿಗೆ ಅನುಗುಣವಾಗಿ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.