ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ರಾತ್ರಿ ಸಂಚಾರ ನಿಷೇಧಿಸಿರುವ ಕ್ರಮವನ್ನು ತೆರವುಗೊಳಿಸಲು ಮುಂದಾಗಿರುವ ನಡೆ ವಿರೋಧಿಸಿ ವನ್ಯಜೀವಿ ಪ್ರಿಯರು, ಪರಿಸರ ಪ್ರೇಮಿಗಳು, ರೈತ ಸಂಘಟನೆ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳು ‘ಬಂಡಿಪುರದೆಡೆಗೆ ನಮ್ಮ ನಡಿಗೆ’ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದರು. ……..ಮುಂದೆ ಓದಿ…..
ಗುಂಡ್ಲುಪೇಟೆ ತಾಲೂಕಿನ ಕಗ್ಗಳದ ಹುಂಡಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಮದ್ದೂರು ಚೆಕ್ ಪೋಸ್ಟ್ ವರೆಗೂ ನೂರಾರು ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಪಾಲ್ಗೊಂಡು ಬಂಡಿಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಂಚಾರ ನಿಷೇಧ ತೆರವುಗೊಳಿಸಬಾರದು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ವನ್ಯಜೀವಿ ಪ್ರಿಯ ಕೃಷ್ಣಪ್ರಸಾದ್, ಸುಪ್ರೀಂಕೋರ್ಟ್ ಆದೇಶದನ್ವಯ 2009ರಿಂದ ಬಂಡಿಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಇದನ್ನು ತೆರವುಗೊಳಿಸಿದರೆ ರಾತ್ರಿ ವೇಳೆ ಹಲವು ಅಪಘಾತಗಳು ಸಂಭವಿಸುವ ಸಾಧ್ಯತೆಗಳಿವೆ. ಹೀಗಾಗಿ ಇದಕ್ಕೆ ಅವಕಾಶ ಮಾಡಿಕೊಡಬಾರದು ಎಂದರು.
ಇನ್ನೋರ್ವ ವನ್ಯಜೀವಿ ಪ್ರಿಯ ನಾಗಾರ್ಜನ, ಬಂಡಿಪುರ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ಸಂಚಾರಕ್ಕೆ ವಾಹನಗಳಿಗೆ ಅವಕಾಶ ಮಾಡಿಕೊಟ್ಟರೆ ಇಲ್ಲಿನ ಪ್ರಾಣಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಇದನ್ನು ವಿರೋಧಿಸಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ತಮಿಳುನಾಡಿನ ನೀಲಗಿರಿ ಜಿಲ್ಲೆಯ ವನ್ಯಜೀವಿಪ್ರಿಯ ರಿಚರ್ಡ್, ಬಂಡಿಪುರ ಪ್ರದೇಶದಲ್ಲಿ ರಾತ್ರಿ ಸಂಚಾರವನ್ನು ಯಾವುದೇ ಕಾರಣಕ್ಕೂ ತೆರವುಗೊಳಿಸಬಾರದು. ಒಂದು ವೇಳೆ ಇಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರೆ, ಬೇರೆ ಬೇರೆ ರಾಜ್ಯಗಳಲ್ಲೂ ಅನುವು ಮಾಡಿಕೊಡಬೇಕಾಗುತ್ತದೆ. ಈ ಬಗ್ಗೆ ಎಚ್ಚರಿಕೆ ವಹಿಸುವುದು ಅಗತ್ಯ ಎಂದರು.
ಕೇರಳದ ವಯನಾಡಿನ ಹಿರಿಯ ಪರಿಸರವಾದಿ ಬಹದ್ದೂರ್ ಷಾ, ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಂಚಾರ ನಿಷೇಧವನ್ನು ಯಥಾಸ್ಥಿತಿ ಮುಂದುವರಿಸಬೇಕು. ಯಾವುದೇ ಕಾರಣಕ್ಕೂ ಈಗಿರುವ ಸಂಚಾರ ನಿಷೇಧವನ್ನು ತೆರವು ಮಾಡಬಾರದು ಎಂದು ತಿಳಿಸಿದರು.
ನಿವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಟಿ. ಬಾಲಚಂದ್ರ, ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ 2009ರಿಂದ ರಾತ್ರಿ ಸಂಚಾರಕ್ಕೆ ನಿರ್ಬಂಧವಿದೆ. ಕೆಲ ತುರ್ತು ಪರಿಸ್ಥಿತಿಯ ಸಂದರ್ಭಗಳು ಹಾಗೂ ವೈದ್ಯಕೀಯ ಕಾರಣಗಳಲ್ಲಿ ಮಾತ್ರ ರಾತ್ರಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇದನ್ನು ಹೊರತುಪಡಿಸಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಅದನ್ನು ತೆರವುಗೊಳಿಸಿದರೆ ಇಲ್ಲಿನ ಪ್ರಾಣಿಗಳಿಗೆ ತೊಂದರೆಯಾಗಲಿದೆ. ಈ ಹಿನ್ನೆಲೆಯಲ್ಲಿ ಅದಕ್ಕೆ ಅವಕಾಶ ಮಾಡಿಕೊಡಬಾರದು ಎಂದರು.
ವಾಟಾಳ್ ನಾಗರಾಜ್ ಪ್ರತಿಭಟನೆ : ಇದೇ ವೇಳೆ ಬಂಡೀಪುರ ರಾತ್ರಿ ಸಂಚಾರ ತೆರವು ವಿರೋಧಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮೈಸೂರಿನಲ್ಲಿ ತೆಂಗಿನಕಾಯಿ ಒಡೆಯುವ ಮೂಲಕ ಪ್ರತಿಭಟನೆ ನಡೆಸಿದರು. ಜಯಚಾಮರಾಜ ಒಡೆಯರ್ ವೃತ್ತದಲ್ಲಿ ವಾಟಾಳ್ ನಾಗರಾಜ್, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಅವರು, ಬಂಡೀಪುರ ರಾತ್ರಿ ಸಂಚಾರ ಆರಂಭಿಸಲು ಪ್ರಯತ್ನ ಮಾಡಲಾಗುತ್ತಿದೆ ಎಂದು ದೂರಿದ್ದಾರೆ. ಕರ್ನಾಟಕವು ಕೇರಳ ಸರ್ಕಾರಕ್ಕೆ ಮಣಿದು ರಾತ್ರಿ ಸಂಚಾರ ನಿಷೇಧ ತೆರವು ಮಾಡಿದ್ರೆ ಅಪಾಯ. ಕಟ್ಟಿಟ್ಟ ಬುತ್ತಿ. ಸರ್ಕಾರ ಯಾವುದೇ ಕಾರಣಕ್ಕೂ ರಾತ್ರಿ ಸಂಚಾರ ನಿಷೇಧ ತೆರವು ಮಾಡಬಾರದು. ನಿಷೇಧ ತೆರವು ಮಾಡಿದರೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ.