ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ಪ್ರಮುಖವಾಗಿ ಉಡುಪಿ ಜಿಲ್ಲೆಯ ಸಿದ್ದಾಪುರದಲ್ಲಿ 6 ಸೆಂಟಿಮೀಟರ್, ಕೊಪ್ಪಳ ಜಿಲ್ಲೆಯ ತಾವರೆಗೆರೆಯಲ್ಲಿ 2 ಸೆಂಟಿಮೀಟರ್ ಹಾಗೂ ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ 4 ಸೆಂಟಿಮೀಟರ್ ಮಳೆಯಾಗಿದೆ.
ಬಂಗಾಳಕೊಲ್ಲಿಯಲ್ಲಿ ನಾಳೆ ವಾಯುಭಾರ ಕುಸಿತವಾಗುವ ಹೆಚ್ಚಿನ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಪ್ರದೇಶದಲ್ಲಿ ಸೆ.7 ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ನಿರ್ದೇಶಕ ಡಾ. ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಪ್ರಮುಖವಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಸೆ. 7 ರ ವರೆಗೆ ಈ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಎರಡು ದಿನಗಳ ಕಾಲ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಸೆ.4 ರಿಂದ 7 ರ ವರೆಗೆ ಈ ಪ್ರದೇಶದ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಇದೇ 4 ರ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.

