ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳವರೆಗೂ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಉತ್ತರ ಕರ್ನಾಟಕ ಭಾಗದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಇದೇ ವೇಳೆ ಏಪ್ರಿಲ್ 12ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸಾರ್ವಜನಿಕರಿಗೆ ಮುನ್ಸೂಚನೆ ನೀಡಿದೆ.
ಆದರೆ, ಮುಂದಿನ ಐದು ದಿನಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ತಾಪಮಾನವು ಕ್ರಮೇಣವಾಗಿ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆಯಿದೆ. ರಾಜ್ಯದಲ್ಲಿ ಸದ್ಯ ಮಳೆ ಸಾಧ್ಯತೆ ಇದೆ.ಮುಂದಿನ ಎರಡು ದಿನಗಳಲ್ಲಿ ಮಧ್ಯಪ್ರದೇಶ, ಒಡಿಶಾ, ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ತಿಂಗಳ ಆರಂಭದಲ್ಲಿ, ಹವಾಮಾನ ಇಲಾಖೆಯು ವಾಯುವ್ಯ ಮತ್ತು ಪರ್ಯಾಯ ದ್ವೀಪದ ಭಾಗಗಳನ್ನು ಹೊರತುಪಡಿಸಿ ದೇಶದ ಹಲವಾರು ಭಾಗಗಳಲ್ಲಿ ಏಪ್ರಿಲ್‌ನಿಂದ ಜೂನ್‌ವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನವನ್ನು ಅನುಭವಿಸುವ ನಿರೀಕ್ಷೆಯಿದೆ ಎಂದು ಹೇಳಿತ್ತು.