ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸವನ್ನು ಕೈಗೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಕೋವಿಡ್ ಕಾರಣದಿಂದಾಗಿ ಯಾವುದೇ ಶೈಕ್ಷಣಿಕ ಪ್ರವಾಸ ಹಮ್ಮಿಕೊಳ್ಳಬಾರದೆಂದು ಸೂಚಿಸಲಾಗಿತ್ತು. ಈಗ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಮುಖವಾದ ಹಿನ್ನಲೆಯಲ್ಲಿ 2022-23ನೇ ಸಾಲಿನ ಶೈಕ್ಷಣಿಕ ಪ್ರವಾಸಕ್ಕೆ ಅನುಮತಿಸಲಾಗಿದೆ ಎಂದಿದ್ದಾರೆ.
ಪ್ರತಿ ವರ್ಷ ಡಿಸೆಂಬರ್ ಅಂತ್ಯದೊಳಗೆ ಶೈಕ್ಷಣಿಕ ಪ್ರವಾಸ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಡಿಸೆಂಬರ್ ನಂತರ ಶೈಕ್ಷಣಿಕ ಪ್ರವಾಸ ಕೈಗೊಳ್ಳದೇ ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರಾಧಾನ್ಯತೆ ನೀಡುವುದು ಎಂದಿದ್ದಾರೆ. ಪೋಷಕರ ಒಪ್ಪಿಗೆ ಪಡೆದ ವಿದ್ಯಾರ್ಥಿಗಳನ್ನು ಮಾತ್ರ ಶೈಕ್ಷಣಿಕ ಪ್ರವಾಸಕ್ಕೆ ಕರೆದೊಯ್ಯುವುದು. ಈ ಪ್ರವಾಸಕ್ಕೆ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾಗುವ ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳುವುದು.ಪ್ರವಾಸ ಕೈಗೊಳ್ಳುವ ಖಾಸಗಿ ಶಾಲೆಗಳು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಕಡ್ಡಾಯವಾಗಿ ಶಾಲಾ ಮಾನ್ಯತೆಯನ್ನು ನವೀಕರಿಸಬೇಕು ಎಂದು ಸೂಚಿಸಿದ್ದಾರೆ.
ಪ್ರವಾಸದ ಸಮಯದಲ್ಲಿ ಯಾವುದೇ ಅವಘಡ ಸಂಭವಿಸಿದರೆ ಶಾಲಾ ಮುಖ್ಯಸ್ಥರೇ ನೇರ ಹೊಣೆಯಾಗಿರುತ್ತಾರೆ. ಇದಕ್ಕೆ ಇಲಾಖೆ ಜವಾಬ್ದಾರಿಯಲ್ಲ. ಕಡ್ಡಾಯವಾಗಿ ಶೈಕ್ಷಣಿಕ ಪ್ರವಾಸವನ್ನು ಕೆಎಸ್‌ಆರ್ ಟಿಸಿ, ರಾಜ್ಯ ಪ್ರವಾಸೋದ್ಯಮ ಇಲಾಖಾ ವಾಹನಗಳಲ್ಲೇ ಕರೆದೊಯ್ಯಬೇಕು ಎಂದು ತಿಳಿಸಿದ್ದಾರೆ.