ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಮತ್ತು ಬಿಸಿಗಾಳಿ ಬೀಸುವ ಸಂಭವವಿದೆ. ಇದರಿಂದ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು ಎಂದು ಯಾದಗಿರಿ ಜಿಲ್ಲಾಧಿಕಾರಿ ಡಾ.ಬಿ.ಸುಶೀಲಾ ತಿಳಿಸಿದ್ದಾರೆ.
ರಾಷ್ಟ್ರೀಯ ಹಾಗೂ ರಾಜ್ಯ ಹವಾಮಾನ ಇಲಾಖೆ ಸೂಚನೆಯಂತೆ ಜಿಲ್ಲೆಯಲ್ಲಿ ಮಾರ್ಚ್, ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್‌ವರೆಗೂ ತಲುಪುವ ಸಂಭವವಿರುತ್ತದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ. ಹೀಗಾಗಿ ಮುನ್ನೆಚ್ಚರಿಕೆಯ ಭಾಗವಾಗಿ ಜಿಲ್ಲಾಡಳಿತದ ಸಲಹೆಗಳನ್ನು ಸಾರ್ವಜನಿಕರು ಪಾಲಿಸಬೇಕು ಎಂದರು. ಬಿಸಿಗಾಳಿಯಿಂದ ರಕ್ಷಣೆ ಹಿನ್ನೆಲೆಯಲ್ಲಿ ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಆದಷ್ಟು ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ, ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ನೀರು ಕುಡಿಯಿರಿ, ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸುವಂತೆ ಅವರು ಸಲಹೆ ನೀಡಿದ್ದಾರೆ. ದೇಹವನ್ನು ನಿರ್ಜಲೀಕರಣಗೊಳಿಸುವ ಮದ್ಯ, ಕಾರ್ಬೋನೇಟೆಡ್ ತಂಪು ಪಾನೀಯ, ಚಹಾ, ಕಾಫಿ ಮತ್ತು ಹೆಚ್ಚಿನ ಪ್ರೋಟೀನ್ ಆಹಾರವನ್ನು ಸೇವಿಸದಿರಿ. ಬಿಸಿಲಿನಲ್ಲಿ ಹೋಗುವಾಗ ಛತ್ರಿ, ಟೋಪಿ, ಬೂಟುಗಳು ಅಥವಾ ಚಪ್ಪಲ್‌ಗಳನ್ನು ಬಳಸಿ, ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕಗಳನ್ನು ತಪ್ಪಿಸಿ ಎಂದು ಯಾದಗಿರಿ ಜಿಲ್ಲಾಧಿಕಾರಿ ಸಲಹೆ ನೀಡಿದ್ದಾರೆ.