ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71 ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪರಿಸರ, ಅರಣ್ಯ ಸಂರಕ್ಷಕರಿಗೆ ಮುಖ್ಯಮಂತ್ರಿ ಪದಕ ವಿತರಿಸಿ ಮಾತನಾಡಿದ ಅವರು ಪ್ರಾಣಿ ಸಂಪತ್ತನ್ನು ನಾಶ ಮಾಡುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ. ಹಸುವನ್ನು ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಮಾನವ-ವನ್ಯಜೀವಿ ಸಹಬಾಳ್ವೆಯ ಪರಿಸರ ಪೂರಕವಾದ ಆಶಯ ಮತ್ತು ಉದ್ದೇಶಕ್ಕಾಗಿ ವನ್ಯಜೀವಿ ಸಪ್ತಾಹವನ್ನು ಆಚರಿಸಲಾಗುತ್ತಿದ್ದು, ಅರಣ್ಯದ ಉಳಿವು ಭೂಮಿಯ ಉಳಿವು ಎನ್ನುವುದನ್ನು ಮರೆಯಬಾರದು ಎಂದು ಹೇಳಿದ್ದಾರೆ. ಆನೆ ಮತ್ತು ಹುಲಿ ಸಂಪತ್ತಿನಲ್ಲಿ ರಾಜ್ಯ ಮೊದಲ ಮತ್ತು ಎರಡನೇ ಸ್ಥಾನದಲ್ಲಿದೆ. ಇದರ ಜೊತೆಗೆ ಪ್ರಾಣಿ ಮತ್ತು ಮನುಷ್ಯರ ಸಂಘರ್ಷ ತಪ್ಪಿ ಸಹಬಾಳ್ವೆ ಏರ್ಪಡಬೇಕು ಎಂದು ತಿಳಿಸಿದ್ದಾರೆ. ಪ್ರಾಣಿಗಳು ಕಾಡು ಬಿಟ್ಟು ಹೊರಗೆ ಏಕೆ ಬರುತ್ತಿವೆ ಎನ್ನುವ ಬಗ್ಗೆ ಅಧ್ಯಯನಗಳು ನಡೆದು ವೈಜ್ಞಾನಿಕ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ ಅಭಿಪ್ರಾಯಪಟ್ಟಿದ್ದಾರೆ. ದಿನೇ ದಿನೇ ಅರಣ್ಯ ಪ್ರದೇಶ ಕಡಿಮೆ ಆಗುತ್ತಿದ್ದರೆ ಮನುಷ್ಯ ಕುಲ ಉಳಿಯಲು ಸಾಧ್ಯವಿಲ್ಲ. ಆದ್ದರಿಂದ ಅರಣ್ಯದ ಉಳಿವು ಮನುಷ್ಯನ ಉಳಿವು ಎನ್ನುವುದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಕಾರ್ಯಕ್ರಮದಲ್ಲಿ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ, ಅರಣ್ಯ ರಾಯಭಾರಿ ಅನಿಲ್ ಕುಂಬ್ಳೆ, ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

