ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಈ ಸಂಬಂಧ ಯಾವುದೇ ಅನಾಹುತಗಳು ಸಂಭವಿಸದಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮ ವಹಿಸಬೇಕಾಗಿದ್ದು, ಜಿಲ್ಲೆಯಲ್ಲಿ ಸಾರ್ವಜನಿಕರು ಪ್ರವಾಸಿಗರು ವಿವಿಧ ಗಿರಿತಾಣಗಳಿಗೆ ಚಾರಣಕ್ಕಾಗಿ ತಂಡೋಪ ತಂಡವಾಗಿ ಭೇಟಿ ನೀಡುವುದು, ಸಾಹಸ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಜಿಲ್ಲಾಡಳಿತ ಗಮನಕ್ಕೆ ಬಂದಿರುತ್ತದೆ.
ದ ಕ ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕಾಗಿರುವುದರಿಂದ ಜಿಲ್ಲೆಯಾದ್ಯಂತ ಪ್ರಾಕೃತಿಕ ವಿಕೋಪದ ಘಟನೆಗಳು ಸಂಭವಿಸುತ್ತಿರುತ್ತವೆ. ಆದ್ದರಿಂದ ಸಾರ್ವಜನಿಕರ ಹಿತಾಸಕ್ತಿಯನ್ನು ಗಮನಿಸಿ ಸೂಕ್ತ ಸುರಕ್ಷತಾ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಸೂಚನೆ: ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕರು ಹಾಗೂ ಪ್ರವಾಸಿಗರು ಅತೀಯಾದ ಮಳೆಯಿಂದ ಭೂಕುಸಿತ, ಗುಡ್ಡ ಕುಸಿತ, ಸಿಡಿಲು ಬಡಿತ ಮರಬೀಳುವಂತಹ ದುರ್ಘಟನೆಗಳು ನಡೆಯುವ ಸಂಭವವಿರುವುದರಿಂದ ಜಿಲ್ಲೆಯಲ್ಲಿ ಗಿರಿತಾಣ, ಶಿಖರಗಳ ಚಾರಣವನ್ನು ಚಾರಣಗಳಿಗೆ ಮಳೆಗಾಲದ ಅವಧಿಯಲ್ಲಿ ಹೊಗುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
ಮಳೆಗಾಲ ಮುಗಿಯುವವರೆಗೆ ಹೋಮ್ ಸ್ಟೇ, ರೆಸಾರ್ಟ್, ಅರಣ್ಯ ಇಲಾಖೆವತಿಯಿಂದ ಕೈಗೊಳ್ಳುವ ಟ್ರೆಕ್ಕಿಂಗ್ ಸಾಹಸ ಚಟುವಟಿಕೆಗಳು ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಈ ಆದೇಶದ ಉಲ್ಲಂಘನೆಯು ಡಿನಾನ್ಸರ್ ಮ್ಯಾನೇಜೇಂಟ್ ಕಾಯ್ದೆ 2005 ಸೆಕ್ಷನ್ 51ಬಿ ಮತ್ತು ಸಂಬಂದಿತ ನಿಯಮ/ಕಾಯ್ದೆಗಳ ವಿವಿಧ ಕಲಂಗಳಡಿಯಲ್ಲಿ ದಂಡನೀಯವಾಗಿದೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಮುಲ್ಲೈ ಮುಗಿಲನ್ ಎಂ.ಪಿ ಅವರು ಸೂಚಿಸಿದ್ದಾರೆ.
ಇದರ ಜೊತೆಗೆ ಜಿಲ್ಲೆಯಾದ್ಯಂತ ಇರುವ ಜಲಪಾತ, ಝರಿ, ನದಿ, ಸಮುದ್ರ, ಜಲಾಶಯದ ಪ್ರದೇಶಗಳಲ್ಲಿ ಸಾರ್ವಜನಿಕರು, ಪ್ರವಾಸಿಗರು ನೀರಿನಲ್ಲಿ ಇಳಿಯುವುದು, ಈಜುವುದು, ಸಾಹಸ ಚಟುವಟಿಕೆಗಳನ್ನು ನಡೆಸುವುದನ್ನು ನಿರ್ಬಂಧಿಸಿ ಮುಂದಿನ ಆದೇಶದವರೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಅದೇಶಿಸಿದ್ದಾರೆ.