ಸ್ಪರ್ಧಾತ್ಮಕ ಯುಗದಲ್ಲಿ ಜ್ಞಾನದ ಆಗರವನ್ನು ಹೆಚ್ಚಿಸುವ ಕಾರ್ಯವನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪುಸ್ತಕಗಳನ್ನು ಓದುವುದರ ಜೊತೆಗೆ ವಿಮರ್ಶಿಸುವುದು ಬಹುಮುಖ್ಯ, ಪ್ರಬುದ್ಧ ಯೋಚನೆಗಳು ವಿದ್ಯಾರ್ಥಿಗಳಲ್ಲಿರಬೇಕು ಎಂದು ಕ್ಯಾಂಪ್ಕೋ ನಿರ್ದೇಶಕ ಮತ್ತು ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಇದರ ಅಧ್ಯಕ್ಷ ಎಸ್. ಆರ್. ಸತೀಶ್ಚಂದ್ರ ಹೇಳಿದರು.
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಸ್ನಾತಕೋತ್ತರ ವಿಭಾಗದ ದಶಮಾನೋತ್ಸವ ವರ್ಷದ ಲೋಗೋ ಅನಾವರಣಗೊಳಿಸಿ ಮಾತನಾಡಿದ ಅವರು, ನಮ್ಮ ದೇಶ ಸಶಕ್ತವಾಗಿದೆ. ಇದಕ್ಕೆ ವಿವೇಕಾನಂದರ ಕೊಡುಗೆ ಅಪಾರವಾದುದು. ನಮ್ಮ ದೇಶದ ಸಂಸ್ಕೃತಿಯನ್ನು ವಿಶ್ವಕ್ಕೆ ಸಾರಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಅಷ್ಟೇ ಅಲ್ಲದೆ ವಿಶ್ವ ಕಂಡ ಶ್ರೇಷ್ಠ ಸನ್ಯಾಸಿಯ ಆದರ್ಶ, ನಿಷ್ಠೆ ಹಾಗೂ ದೇಶ ಪ್ರೇಮ ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಅಳವಡಿಸಿಕೊಂಡಿರುವುದು ಬಹಳ ಹೆಮ್ಮೆಯ ವಿಚಾರ ಎಂದು ಎಸ್. ಆರ್. ಸತೀಶ್ಚಂದ್ರ ಹೇಳಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದ ವಿಶ್ರಾಂತ ವಾಣಿಜ್ಯ ವಿಭಾಗದ ಪ್ರಾಧ್ಯಾಪಕರು ಪ್ರೊ.ಸಂಪತ್ತಿಲ ಈಶ್ವರ ಭಟ್, ನಮ್ಮ ನಡುವೆ ಇರುವ ವಿಪುಲವಾದ ಅವಕಾಶಗಳನ್ನು ಸದುಪಯೋಗಪಡಿಸಲು ವಿದ್ಯಾರ್ಥಿಗಳು ತಮ್ಮಲ್ಲಿ ಕ್ರಿಯಾಶೀಲತೆ ಮತ್ತು ಸೃಜನಶೀಲತೆಯನ್ನು ಅಳವಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ವಿವೇಕಾನಂದ ವಿದ್ಯಾಸಂಸ್ಥೆ ಅತ್ಯಂತ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಸಂಯಮ, ಶಿಸ್ತು ಹಾಗೂ ಆಚಾರ – ವಿಚಾರಗಳನ್ನು ವಿದ್ಯಾರ್ಥಿ ನೆಲೆಯಲ್ಲಿಯೇ ನೀಡಿ ಒಬ್ಬ ಉತ್ತಮ ಪ್ರಜೆಯನ್ನಾಗಿ ನಿರ್ಮಾಣ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ನುಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಮಾತನಾಡಿ, ಸ್ನಾತಕೋತ್ತರ ಪದವಿಯ ಶಿಕ್ಷಣವು ವಿದ್ಯಾರ್ಥಿಗಳ ಭವಿಷ್ಯಕ್ಕೆ ಬುನಾದಿಯಾಗಿದ್ದು, ಈ ವೇಳೆಯಲ್ಲಿ ವಿದ್ಯಾರ್ಥಿಗಳು ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಬೇಕು. ಹಾಗೆಯೇ ಪ್ರತಿಯೊಬ್ಬ ಸ್ನಾತಕೋತ್ತರ ವಿದ್ಯಾರ್ಥಿಯಲ್ಲಿಯೂ ಗುರಿ ಇರಬೇಕು, ಅದನ್ನು ಸಾಧಿಸುವ ಛಲದ ಜೊತೆಗೆ ತುಡಿತವೂ ಬೆಳೆಸಿಕೊಂಡಲ್ಲಿ ಮಾತ್ರ ಜೀವನದಲ್ಲಿ ಗೆಲ್ಲುವುದಕ್ಕೆ ಸಾಧ್ಯ. ಈ ನಿಟ್ಟಿನಲ್ಲಿ ನಮ್ಮ ಹಿರಿಯರ ವಿಚಾರಧಾರೆಗಳು ನಮಗೆ ಪ್ರೇರಣೆಯಾಗಲಿವೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳೀಕೃಷ್ಣ ಕೆ ಎನ್, ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮವನ್ನು ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯ ಸರಸ್ವತಿ ಬಿ ಸ್ವಾಗತಿಸಿ, ಸ್ನಾತಕೋತ್ತರ ವಿಭಾಗದ ನಿರ್ದೇಶಕ ಡಾ. ಎಚ್. ಜಿ. ಶ್ರೀಧರ್ ವಂದಿಸಿದರು. ಸ್ನಾತಕೋತ್ತರ ವಾಣಿಜ್ಯ ವಿಭಾಗದ ಉಪನ್ಯಾಸಕಿ ಲಕ್ಷ್ಮಿ ಭಟ್ ಕಾರ್ಯಕ್ರಮ ನಿರೂಪಿಸಿದರು.