ಕೇರಳದ ವಯನಾಡ್ ಜಿಲ್ಲೆಯಲ್ಲಿ ಭೀಕರ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ ಏರಿಕೆಯಾಗುತ್ತಿದೆ.ಈಗಾಗಲೇ 84 ಮೃತದೇಹ ಪತ್ತೆಯಾಗಿದೆ. ಕಾರ್ಯಾಚರಣೆ ನಡೆಯುತ್ತಿದೆ. ಸುಮಾರು 400 ಕುಟುಂಬಗಳು ತೊಂದರೆಗೊಳಗಾಗಿವೆ. 65-70 ಮಂದಿ ಗಾಯಾಳುಗಳನ್ನು ಈಗಾಗಲೇ ವಿವಿಧ ಆಸ್ಪತ್ರಗಳಿಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಕ್ಷಣಾ ತಂಡಗಳು ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ನಡೆಸುತ್ತಿವೆ.
Advertisement
Advertisement
ಕೇರಳದ ವಯನಾಡ್ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಭೂಕುಸಿತದಿಂದ ಸಂಭವಿಸಿದ ಸಾವು ನೋವಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಪ್ರಾಕೃತಿಕ ಬಿಕ್ಕಟ್ಟನ್ನು ಎದುರಿಸಲು ಕೇಂದ್ರದಿಂದ ಸಾಧ್ಯವಿರುವ ಎಲ್ಲ ನೆರವು ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪ್ರಧಾನಿ ಭರವಸೆ ನೀಡಿದ್ದಾರೆ. ‘ವಯನಾಡ್ನ ಕೆಲವು ಭಾಗಗಳಲ್ಲಿ ಉಂಟಾದ ಭೂಕುಸಿತ ಆಘಾತ ಉಂಟುಮಾಡಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳಿಗೆ ಸಂತಾಪಗಳನ್ನು ಸೂಚಿಸುತ್ತಾ, ಗಾಯಾಳುಗಳ ಚೇತರಿಕೆಗೆ ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಸಹಾಯ ಮಾಡಲು ಪ್ರಸ್ತುತ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ’ ಎಂದು ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. ‘ಕೇರಳ ಸಿಎಂ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿದ್ದೇನೆ. ಅಲ್ಲಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೇಂದ್ರದಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ಭರವಸೆ ನೀಡಿದ್ದೇನೆ’ ಎಂದು ಅವರು ತಿಳಿಸಿದ್ದಾರೆ.
ಜನರ ಸ್ಥಳಾಂತರಕ್ಕೆ ಹೆಲಿಕಾಪ್ಟರ್ ನಿಯೋಜನೆ: ಚೂರಲ್ಮಲಾ ಪಟ್ಟಣದಲ್ಲಿ ಒಂದು ಮಗು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದರೆ, ತೊಂಡರ್ನಾಡ್ ಗ್ರಾಮದಲ್ಲಿ ನೇಪಾಳ ಮೂಲದ ಕುಟುಂಬದ ಒಂದು ವರ್ಷದ ಮಗು ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ, ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರವನ್ನು ಪ್ರಧಾನಿ ಕಾರ್ಯಾಲಯ ಘೋಷಿಸಿದೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ”ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳು ಶೀಘ್ರದಲ್ಲೇ ಸೂಲೂರಿನಿಂದ ವಯನಾಡ್‌ಗೆ ತೆರಳಲಿವೆ” ಎಂದು ಫೇಸ್‌ಬುಕ್ ಪೋಸ್ಟ್ ಮಾಡಿದ್ದಾರೆ. ಶಾಸಕ ಟಿ.ಸಿದ್ದಿಕ್ ಪ್ರತಿಕ್ರಿಯಿಸಿ, ”ಮುಂಡಕ್ಕೈ ಪ್ರದೇಶದಿಂದ ಸಂತ್ರಸ್ತ ಜನರನ್ನು ಏರ್ಲಿಫ್ಟ್ ಮಾಡಲು ಅಧಿಕಾರಿಗಳು ಯೋಜನೆ ರೂಪಿಸುತ್ತಿದ್ದಾರೆ. ಭೂಕುಸಿತದಲ್ಲಿ ಕಾಣೆಯಾದ ಮತ್ತು ಸತ್ತವರ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ಇಲ್ಲ. ಹಲವು ಪ್ರದೇಶಗಳು ಸಂಪರ್ಕ ಕಡಿತಗೊಂಡಿವೆ. ಎನ್‌ಡಿಆರ್‌ಎಫ್ ಸಿಬ್ಬಂದಿ ಘಟನಾ ಸ್ಥಳಗಳಿಗೆ ತಲುಪಲು ಪ್ರಯತ್ನಿಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.
ಈ ನಡುವೆ ಹಲವಾರು ಕುಟುಂಬಗಳನ್ನು ಸುರಕ್ಷಿತವಾಗಿರುವ ಅವರ ಸಂಬಂಧಿಕರ ಮನೆಗಳು ಹಾಗೂ ವಿವಿಧ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೆಚ್ಚಿನ ಸಂಖ್ಯೆಯ ಹೋಂಸ್ಟೇಗಳನ್ನು ಹೊಂದಿರುವ ಅಟ್ಟಮಾಲಾವು ಪ್ರವೇಶದಲ್ಲಿ ಅಪಾರ ಹಾನಿಯಾಗಿದೆ. ಪ್ರವಾಸಿಗರೂ ಸಿಕ್ಕಿಬಿದ್ದಿರುವ ವರದಿಗಳಾಗಿವೆ.
Source: ANI