ಎಲ್ಲಾ ರೀತಿಯ ಸೂಕ್ತ ಮುಂಜಾಗ್ರತಾ ಕ್ರಮದೊಂದಿಗೆ ಸಂಪ್ರದಾಯದ ಪ್ರಕಾರ ಕರಾವಳಿಯ ಗಂಡುಕಲೆ ಯಕ್ಷಗಾನ ಪ್ರದರ್ಶನ ಜಿಲ್ಲೆಯಾದ್ಯಂತ ನವೆಂಬರ್ ಅಂತ್ಯದಿಂದ ಪ್ರದರ್ಶನಗೊಳ್ಳಲಿದೆ ಎಂದು ಮುಜರಾಯಿ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಯಕ್ಷಗಾನ ಮೇಳಗಳ ಸಂಚಾಲಕರ ಸಭೆಯಲ್ಲಿ ಮಾತನಾಡಿದ ಅವರು ಕೋವಿಡ್–19 ನಿಂದಾಗಿ ಯಕ್ಷಗಾನ ಕಲಾವಿದರ ಸ್ಥಿತಿ ಸಂಕಷ್ಟದಲ್ಲಿ ಸಿಲುಕಿದ್ದು, ಯಾವುದೇ ಕಲಾವಿದನಿಗೆ ಅನ್ಯಾಯವಾಗದಂತೆ ಶೀಘ್ರದಲ್ಲಿಯೇ ಸರ್ಕಾರದಿಂದ ಆರ್ಥಿಕ ನೆರವು ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟೀಲು, ಬಪ್ಪನಾಡು, ಸಸಿಹಿತ್ಲು ಸೇರಿದಂತೆ 20 ಕ್ಕೂ ಹೆಚ್ಚು ವೃತ್ತಿಪರ ತೆಂಕುತಿಟ್ಟಿನ ಯಕ್ಷಗಾನ ಮೇಳಗಳಿದ್ದು, ಸರಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಕಲಾವಿದರು ಮತ್ತು ಪೂರಕ ಕೆಲಸಗಾರರಿದ್ದಾರೆ. ನವೆಂಬರ್ ಅಂತ್ಯಕ್ಕೆ ಯಕ್ಷಗಾನ ಬಯಲಾಟ ಆರಂಭವಾಗಲಿದ್ದು, ಕಲಾವಿದರ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವುದು ಆದ್ಯ ಕರ್ತವ್ಯವಾಗಿರುವುದರಿಂದ ಸರಕಾರದ ಮಾರ್ಗಸೂಚಿಯಂತೆ ಆರೋಗ್ಯ ಇಲಾಖೆಯ ವತಿಯಿಂದ ಯಕ್ಷಗಾನ ಕಲಾವಿದರು ಪ್ರಾರಂಭಕ್ಕೂ ಮುನ್ನ ಕಡ್ಡಾಯವಾಗಿ ಕೊರೋನಾ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು. ಇದರ ಜೊತೆಗೆ ಯಕ್ಷಗಾನ ಮೇಳಗಳಲ್ಲಿಯೂ ಸಹ ವಾರಕ್ಕೆ ಒಂದು ಬಾರಿ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಬೇಕೆಂದರು. ಎಲ್ಲಾ ಕಲಾವಿದರು ಹೊಸ ಹುಮ್ಮಸ್ಸಿನಿಂದ ಮಾನಸಿಕ ಮತ್ತು ದೈಹಿಕವಾಗಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಯಾವ ಕಲಾವಿದರು ಕೆಲಸವಿಲ್ಲದೆ ಕೂರಬಾರದು ಎಂದರು.
ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಮಾತನಾಡಿ, ಬಯಲು ಪ್ರದೇಶಗಳಲ್ಲಿ ಯಕ್ಷಗಾನ ಪ್ರಾರಂಭಕ್ಕೂ ಮುನ್ನ ಮುನ್ನೆಚ್ಚರಿಕಾ ಕ್ರಮವಾಗಿ ಕಡ್ಡಾಯವಾಗಿ 200 ಜನ ಮೀರದಂತೆ ಕ್ರಮವಹಿಸಬೇಕು. ಆ ಪ್ರದೇಶದ ಸುತ್ತಮುತ್ತ ಸ್ಯಾನಿಟೈಸರ್ ಮಾಡಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಕಡ್ಡಾಯವಾಗಿ ಮುಖಗವಸು ಹಾಕುವಂತೆ ಸಂಬಂಧಪಟ್ಟವರು ಕ್ರಮವಹಿಸಬೇಕು ಎಂದರು.
ಕಟೀಲು ದೇವಳದ ಆಡಳಿತ ಮೊಕ್ತೇಸರ ಶ್ರೀ ಹರಿ ಅಸ್ರಣ್ಣ , ಯಕ್ಷಗಾನದ ತಂಡದ ಉಜಿರೆ ಅಶೋಕ್ ಭಟ್ ಮೊದಲಾದವರು ಮಾತನಾಡಿದರು. ಸಭೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿ ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕ ರಾಜೇಶ್, ಕಲಾವಿದರ ಪರವಾಗಿ ಪಟ್ಲ ಸತೀಶ್ ಶೆಟ್ಟಿ, ಸರಪಾಡಿ ಅಶೋಕ್ ಶೆಟ್ಟಿ, ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸೀತಾರಾಮ್ ಕುಲಾಲ್ ಹಾಗೂ ಯಕ್ಷಗಾನ ತಂಡಗಳ ಸಂಚಾಲಕರು ಹಾಗೂ ಕಲಾವಿದರು ಉಪಸ್ಥಿತರಿದ್ದರು.
ಹಸಿರು ನ್ಯಾಯಾಧೀಕರಣ ಆದೇಶ ಹಾಗೂ ಜಿಲ್ಲಾಧಿಕಾರಿ ಸೂಚನೆಯಂತೆ ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ…
ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು…
ಭವಿಷ್ಯದಲ್ಲಿ ದೇಶದ 6 ಲಕ್ಷ ಗ್ರಾಮಗಳಿಗೆ ತಲಾ 10 ಡ್ರೋಣ್ ಗಳನ್ನು ವಿತರಿಸುವ…
ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30…
ಹದಿನೈದು ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಮತ್ತು…
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…