ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇವರ 2019ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ ಪುರಸ್ಕೃತರಿಗೆ ಯಕ್ಷಸಿರಿ ವಾರ್ಷಿಕ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಪ್ರಧಾನ ಸಮಾರಂಭವು ನವೆಂಬರ್ 8ರಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಕಲಾಭವನ ಮಂಗಳೂರಿನಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕ್ರತಿ ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಸಿ.ಟಿ.ರವಿ ಉದ್ಘಾಟಿಸಿ, ಗೌರವ ಪ್ರಶಸ್ತಿ ಪ್ರದಾನ ಮಾಡಲಿದ್ದು, ಯಕ್ಷಸಿರಿ ವಾರ್ಷಿಕ ಪ್ರಶಸ್ತಿ ಪ್ರದಾನವನ್ನು ಮುಜರಾಯಿ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲ ಸಾರಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಪುಸ್ತಕ ಬಹುಮಾನ ಪ್ರಶಸ್ತಿ ಪ್ರದಾನವನ್ನು ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲು, ಹಾಗೂ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್, ಬೆಂಗಳೂರು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಪ್ರೊ.ಎಂ.ಎ.ಹೆಗಡೆ, ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರ ದಿವಾಕರ್ ಪಾಂಡೇಶ್ವರ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್‍ಸಾರ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ರಾಜೇಶ್ ಜಿ ಭಾಗವಹಿಸಲಿರುವರು.
ಕಾರ್ಯಕ್ರಮದಲ್ಲಿ 2019ನೇ ಸಾಲಿನ ಗೌರವ ಪ್ರಶಸ್ತಿ ಪುರಸ್ಕ್ರತರು ಡಾ.ಚಂದ್ರಶೇಖರ್ ದಾಮ್ಲೆ, ಯಕ್ಷಸಿರಿ ಪ್ರಶಸ್ತಿ ಪುರಸ್ಕ್ರತ ಉಬರಡ್ಕ ಉಮೇಶ್ ಶೆಟ್ಟಿ, ಕುರಿಯ ಗಣಪತಿ ಶಾಸ್ತ್ರಿ ಹಾಗೂ ಪುಸ್ತಕ ಬಹುಮಾನ ಪುರಸ್ಕೃತ ಹೊಸ್ತೋಟ ಮಂಜುನಾಥ ಭಾಗವತ, ಶ್ರೀ ಗುರುದೇವ ಪ್ರಕಾಶನ ಒಡಿಯೂರು ಮತ್ತು ಕೃಷ್ಣಪ್ರಕಾಶ ಉಳಿತ್ತಾಯ ಪ್ರಶಸ್ತಿಗಳ ಗೌರವವನ್ನು ಪಡೆಯಲಿದ್ದಾರೆ ಎಂದು ಅಕಾಡೆಮಿಯ ಪ್ರಕಟಣೆಯು ತಿಳಿಸಿದೆ.




