ಕೃಷಿಯಲ್ಲಿ ತಂತ್ರಜ್ಞಾನವನ್ನು ಅಗತ್ಯಕ್ಕೆ ತಕ್ಕಂತೆ ಬಳಸಿಕೊಳ್ಳುವ ಮೂಲಕ ಅದರ ಪ್ರಯೋಜನ ರೈತರಿಗೆ ಸಿಗುವಂತೆ ನೋಡಿಕೊಳ್ಳಬೇಕು. ಜೊತೆಗೆ ಕೃಷಿ ಕ್ಷೇತ್ರದತ್ತ ಯುವಕರನ್ನು ಆಕರ್ಷಿಸುವ ಕೆಲಸ ಆಗಬೇಕಾಗಿದೆ. ಕೃಷಿ ವಲಯದಲ್ಲಿ ತೊಡಗಿಸಿಕೊಂಡಿರುವ ನವೋದ್ಯಮಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಅಗತ್ಯವಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದರು.
ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಜಿಕೆವಿಕೆಯಲ್ಲಿ ಅಗ್ರಿಕಲ್ಚರ್ ಫ್ಯೂಚರ್, startup conclave ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ನವೋದ್ಯಮಗಳಿಗೆ ಹೆಚ್ಚಿನ ಉತ್ತೇಜನ ನೀಡಲು ಮುಂದಾಗಿದೆ. ಈ ಸಂಬಂಧ ಮುಂಬರುವ ಬಜೆಟ್ ನಲ್ಲೂ ಕೂಡ ಅನುದಾನ ಹೆಚ್ಚು ನೀಡುವಂತೆ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೃಷಿಗೆ ಸಂಬಂಧಿಸಿದ ಡ್ರೋನ್ ಗಳು , ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ವಿವಿಧ ಪ್ರಾತ್ಯಕ್ಷಿಕೆ ಮತ್ತು ಮಳಿಗೆಗಳನ್ನು ವೀಕ್ಷಿಸಿದ ಸಚಿವರು ಸಂಬಂಧಪಟ್ಟವರಿಂದ ಮಾಹಿತಿ ಪಡೆದುಕೊಂಡರು. ವಿವಿಧ ಆವಿಷ್ಕಾರಗಳ ಕುರಿತ ಕಾಫಿಟೇಬಲ್ ಪುಸ್ತಕ ಬಿಡುಗಡೆ ಮಾಡಿದರು.
ಈ ವೇಳೆ ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ. ಸುರೇಶ, ಸೇರಿದಂತೆ ಹಲವರು ಉಪಸ್ಥಿತರಿದ್ದರು.